ADVERTISEMENT

ಷೇರುಪೇಟೆ: ಸೆನ್ಸೆಕ್ಸ್ 1,048 ಅಂಶ ಇಳಿಕೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 14:28 IST
Last Updated 13 ಫೆಬ್ರುವರಿ 2026, 14:28 IST
ಸೆನ್ಸೆಕ್ಸ್
ಸೆನ್ಸೆಕ್ಸ್   

ಮುಂಬೈ: ದೇಶದ ಷೇರುಪೇಟೆ ಸೂಚ್ಯಂಕಗಳು ಶುಕ್ರವಾರದ ವಹಿವಾಟಿನಲ್ಲಿ ಶೇ 1ಕ್ಕೂ ಹೆಚ್ಚು ಇಳಿಕೆ ಕಂಡಿವೆ.

ಲೋಹ, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ವಲಯದ ಕಂಪನಿಗಳ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1,048 ಅಂಶ (ಶೇ 1.25) ಇಳಿಕೆಯಾಗಿ, 82,626ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 336 ಅಂಶ (ಶೇ 1.30) ಕಡಿಮೆಯಾಗಿ, 25,471ಕ್ಕೆ ಕೊನೆಗೊಂಡಿದೆ. 

ADVERTISEMENT

ಷೇರು ಸೂಚ್ಯಂಕಗಳ ಇಳಿಕೆಯಿಂದ ಹೂಡಿಕೆದಾರರ ಸಂಪತ್ತು ಒಂದೇ ದಿನ ₹7 ಲಕ್ಷ ಕೋಟಿಯಷ್ಟು ಕರಗಿದೆ.

ಹಿಂದೂಸ್ತಾನ್ ಯೂನಿಲಿವರ್‌, ಎಟರ್ನಲ್‌, ಟೈಟನ್‌, ಟಾಟಾ ಸ್ಟೀಲ್, ಅದಾನಿ ಪೋರ್ಟ್ಸ್, ಟಿಸಿಎಸ್, ಪವರ್‌ ಗ್ರಿಡ್, ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌, ಏಷ್ಯನ್ ಪೇಂಟ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ಎಚ್‌ಸಿಎಲ್‌ ಟೆಕ್ನಾಲಜೀಸ್‌ನ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ.

ಕೃತಕ ಬುದ್ಧಿಮತ್ತೆ ಕಾರಣದಿಂದಾಗಿ ಉಂಟಾಗಬಹುದಾದ ಪಲ್ಲಟಗಳಿಗೆ ಸಂಬಂಧಿಸಿದ ಕಳವಳಗಳು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದವು. ಇದರಿಂದ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಮುಂದಾಗಿದ್ದರಿಂದ ಸೂಚ್ಯಂಕಗಳು ಇಳಿಕೆಯಾದವು ಎಂದು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.