ಮುಂಬೈ: ಹೂಡಿಕೆದಾರರಿಂದ ಷೇರುಗಳ ಖರೀದಿ ಹೆಚ್ಚಳ ಮತ್ತು ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಹೆಚ್ಚಳದಿಂದಾಗಿ ಗುರುವಾರ ನಡೆದ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಶೇ 1ರಷ್ಟು ಏರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 862 ಅಂಶ (ಶೇ 1.04) ಏರಿಕೆಯಾಗಿ, 83,467ಕ್ಕೆ ವಹಿವಾಟು ಕೊನೆಗೊಂಡಿದೆ. ದಿನದ ವಹಿವಾಟಿನ ನಡುವೆ 1,010 ಅಂಶ ಜಿಗಿತವಾಗಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 261 ಅಂಶ (ಶೇ 1.03) ಹೆಚ್ಚಳವಾಗಿ, 25,585ಕ್ಕೆ ಅಂತ್ಯಗೊಂಡಿದೆ. ಇದು ನಾಲ್ಕು ತಿಂಗಳ ಗರಿಷ್ಠ ಮಟ್ಟದ ಏರಿಕೆಯಾಗಿದೆ.
‘ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಮಾತುಕತೆ ಸುತ್ತ ಆಶಾವಾದ ಹೆಚ್ಚಳವಾಗಿದೆ. ವಿದೇಶಿ ಬಂಡವಾಳದ ಒಳಹರಿವು, ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ, ಡಾಲರ್ ಮೌಲ್ಯ ಇಳಿಕೆಯು ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಕಾರಣವಾಗಿವೆ’ ಎಂದು ಜಿಯೊಜಿತ್ ಇನ್ವೆಸ್ಟ್‌ಮೆಂಟ್ ಲಿಮಿಟೆಡ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.
ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಹೆಚ್ಚಿಸಿದೆ. ಇದು ಸೂಚ್ಯಂಕಗಳ ಏರಿಕೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.57ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರೆಲ್ ದರವು 62.26 ಡಾಲರ್ ಆಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬುಧವಾರ ₹68 ಕೋಟಿ ಮತ್ತು ದೇಶೀಯ ಸಾಂಸ್ಥಿಕ ಹೂಡಿಕೆದಾರರು ₹4,650 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.