ಚಿಕ್ಕಬಳ್ಳಾಪುರ: ನಗರದಲ್ಲಿ ಹಲವಾರು ವರ್ಷಗಳಿಂದ ಆಮೆ ವೇಗದಲ್ಲಿ ನಡೆಯುತ್ತಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭವನ ಕೊನೆಗೂ ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿದ್ದು ಶನಿವಾರ ಉದ್ಘಾಟನೆಯಾಗಲಿದೆ.
ಸಕಾಲಿಕವಾಗಿ ಅನುದಾನ ಬಿಡುಗಡೆ ಆಗದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಭವನ ನಿರ್ಮಾಣ ಕಾಮಗಾರಿಗೆ ಹಿನ್ನೆಡೆಗಿತ್ತು. ಸರ್ಕಾರದ ಅನುದಾನ, ಶಾಸಕರ ನಿಧಿಯಿಂದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ.
`ಹಳೆ ಬಸ್ ನಿಲ್ದಾಣದ ಬಳಿ ನಿರ್ಮಿಸಿರುವ ಅಂಬೇಡ್ಕರ್ ಭವನಕ್ಕೆ ಸುಮಾರು 80 ಲಕ್ಷ ರೂಪಾಯಿ ವೆಚ್ಚವಾಗಿದೆ. ಸರ್ಕಾರ ಮತ್ತು ಶಾಸಕರ ನಿಧಿಯಿಂದ ಭವನದ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಎರಡು ಅಂತಸ್ತಿನ ಭವನವು ಬೃಹತ್ ಸಭಾಂಗಣ, ಕೊಠಡಿ, ಶೌಚಾಲಯ ಮತ್ತು ಇತರ ಸೌಲಭ್ಯಗಳನ್ನು ಹೊಂದಿದೆ. ಸಭಾಂಗಣದಲ್ಲಿ 200ಕ್ಕೂ ಹೆಚ್ಚು ಮಂದಿ ಕೂತು ಕಾರ್ಯಕ್ರಮವನ್ನು ವೀಕ್ಷಿಸಬಹುದು. ಭವನದ ಸುತ್ತಲೂ ಗೋಡೆ ನಿರ್ಮಿಸಿ ಸುಂದರ ಆವರಣ ಕಲ್ಪಿಸಲಾಗಿದೆ~ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ದೇವರಾಜ್ `ಪ್ರಜಾವಾಣಿ~ಗೆ ತಿಳಿಸಿದರು.
`ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿ ಅವರು ಭವನವನ್ನು ಉದ್ಘಾಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ವಿವಿಧ ಸಂಘ-ಸಂಸ್ಥೆಗಳು ಭವನದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬಹುದು~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.