ADVERTISEMENT

ಅಕ್ರಮ ಗಣಿಗಾರಿಕೆ: ಕೋರ್ಟ್ ಉಸ್ತುವಾರಿ ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2011, 19:30 IST
Last Updated 8 ಸೆಪ್ಟೆಂಬರ್ 2011, 19:30 IST

ಚಿತ್ರದುರ್ಗ: ಕರ್ನಾಟಕದಲ್ಲಿನ ಅಕ್ರಮ ಗಣಿಗಾರಿಕೆಯ ಕುರಿತು ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ಸಿಬಿಐನಿಂದ ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯ ಅಧ್ಯಕ್ಷ ಎಸ್.ಆರ್. ಹಿರೇಮಠ ಮನವಿ ಮಾಡಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಬೇಕು ಅಥವಾ ವಿಶೇಷ ತನಿಖಾ ತಂಡವನ್ನು ರಚಿಸಲು ನಿರ್ದೇಶನ ನೀಡಬೇಕು ಎಂದು ತಮ್ಮ ಸಂಸ್ಥೆಯಿಂದ ಆ. 2ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರದ ಉಸ್ತುವಾರಿಯ ತನಿಖೆ ಪಾರದರ್ಶಕವಾಗಿರುವುದಿಲ್ಲ. ಆದ್ದರಿಂದ, ನ್ಯಾಯಾಲಯದ ಉಸ್ತುವಾರಿಯಲ್ಲೇ ತನಿಖೆಯಾಗಬೇಕು. ಕರ್ನಾಟಕ ಸರ್ಕಾರವೂ ಸಹ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ನ್ಯಾಯಾಲಯದ ಉಸ್ತುವಾರಿಯಲ್ಲಿ ಸಿಬಿಐಗೆ ವಹಿಸುವಂತೆ ಮನವಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರಿಂದ ತೆರಿಗೆ ವಂಚನೆ ಮತ್ತು ಹಣಕಾಸಿನ ವಹಿವಾಟು ಹಾಗೂ ಲಂಚ ಮುಂತಾದ ಅಪರಾಧ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸುವಂತೆ ತನಿಖಾ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.