ದಾವಣಗೆರೆ: ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಒತ್ತಾಯಿಸಿ ಜಿಲ್ಲಾ ಅಡಿಕೆ ಬೆಳೆಗಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸೋಮವಾರ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಅವರ ಜನಸಂಪರ್ಕ ಕಚೇರಿ ಮುಂದೆ ಧರಣಿ ನಡೆಸಲಾಯಿತು.ಜಿಲ್ಲೆಯ ಅಡಿಕೆ ಬೆಳೆಗಾರರು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ. ಅಡಿಕೆ ಮಾರುಕಟ್ಟೆಯಲ್ಲಿ ಒಂದು ತಿಂಗಳಿನಿಂದ ವಹಿವಾಟು ನಡೆದಿಲ್ಲ.
ಫೆ. 7ರಿಂದ ನಿರಂತರ ಧರಣಿ ನಡೆಸಿದರೂ, ರಸ್ತೆ, ರೈಲುತಡೆ ಚಳವಳಿ ಕೈಗೊಂಡರೂ ಸರ್ಕಾರ ಸಮಸ್ಯೆ ನಿವಾರಣೆಗೆಸ್ಪಂದಿಸಿಲ್ಲ. ಬರೀ ಭರವಸೆ ದೊರೆತಿದೆಯೇ ಹೊರತು ಬೆಳೆಗಾರರ ಹಿತರಕ್ಷಣೆಗೆ ಮುಂದಾಗಿಲ್ಲ ಎಂದು ದೂರಿದರು.ಗುಟ್ಕಾದಲ್ಲಿ ಬಳಸುತ್ತಿರುವ ಪ್ಲಾಸ್ಟಿಕ್ ಸ್ಯಾಶೆ ನಿಷೇಧಿಸಿರುವ ಸುಪ್ರೀಂ ಕೋರ್ಟ್ ನಿರ್ಧಾರದ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಮೇಲ್ಮನವಿ ಸಲ್ಲಿಸಬೇಕು.
ರಾಜ್ಯ ಸರ್ಕಾರ ಈ ಕುರಿತು ಕೇಂದ್ರದ ಮೇಲೆ ಒತ್ತಡ ಹಾಕಬೇಕು. ಅಡಿಕೆಗೆ ಉತ್ತಮ ಬೆಲೆ ದೊರೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಮತ್ತೆ ಇಂತಹ ಸಂಕಷ್ಟದ ಪರಿಸ್ಥಿತಿ ಎದುರಾಗದಂತೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಲೋಕಸಭಾ ಸದಸ್ಯರು, ಸಚಿವರು, ಶಾಸಕರ ತುರ್ತು ಸಭೆ ಕರೆದು ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಸಮಸ್ಯೆ ಪರಿಹಾರಕ್ಕೆ ಸೂಕ್ತ ಮಾರ್ಗ ಕಂಡುಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.
ರೈತ ಮುಖಂಡರಾದ ಆವರಗೆರೆ ರುದ್ರಮುನಿ, ಕೋಟೆಹಾಳ್ ಪ್ರಕಾಶ್, ಮಲ್ಲೇಶಪ್ಪ, ಮಂಜಪ್ಪ, ಆರ್.ಜಿ. ಹಳ್ಳಿ ಬಸವರಾಜ್, ಮುದೇಗೌಡ್ರು ಗಿರೀಶ್, ಚಿಕ್ಕನಹಳ್ಳಿ ಮಲ್ಲೇಶಪ್ಪ, ಪ್ರಭಾಕರ್, ಬಸವರಾಜ್ ಮತ್ತಿತರರು ಧರಣಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.