ADVERTISEMENT

ಅರಸು ಯೋಜನೆಗಳು ಅಮರ: ಬೆಳ್ಳುಬ್ಬಿ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2012, 19:30 IST
Last Updated 20 ಆಗಸ್ಟ್ 2012, 19:30 IST

ವಿಜಾಪುರ: `ಹಿಂದುಳಿದ ಹಾಗೂ ಶೋಷಿತ ವರ್ಗಗಳ ಸುಧಾರಣೆಗಾಗಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಾರಿಗೊಳಿಸಿದ ಜನ ಕಲ್ಯಾಣ ಯೋಜನೆಗಳು ಅಮರವಾಗಿವೆ~ ಎಂದು  ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅರಸು ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

`ಅರಸು ಒಬ್ಬ ರಾಜಕೀಯ ಧ್ರುವತಾರೆ. ಈ ಮಹಾನ್ ವ್ಯಕ್ತಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಕಾರ್ಯಕ್ರಮಗಳು ಇಡಿ ರಾಷ್ಟ್ರಕ್ಕೆ ಮಾದರಿಯಾಗಿದ್ದವು. ಪಕ್ಷಾತೀತವಾಗಿ ಅವರನ್ನು  ಗೌರವಿಸಬೇಕು~ ಎಂದ ಅವರು, `ಭೂರಹಿತರಿಗೆ ಭೂಸುಧಾರಣೆ ಕಾಯಿದೆ ಜಾರಿಗೊಳಿಸಿ ಭೂಮಿ ಹಕ್ಕನ್ನು ನೀಡಿದರು.

ಗಂಗಾಕಲ್ಯಾಣದಂತಹ ಹಲವಾರು ಯೋಜನೆಗಳನ್ನು ರೂಪಿಸಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದರು~ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, `ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದೇವರಾಜ ಅರಸು ಅವರ ಚಿಂತನೆಗಳನ್ನು ಯೋಜನೆ ರೂಪದಲ್ಲಿ ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳಿಗೆ ಮೀಸಲಾದ ಬಹುಪಾಲು ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ~ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಷ್ಣು ಶಿಂಧೆ ಉಪನ್ಯಾಸ ನೀಡಿದರು. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಪರಿಕರ ವಿತರಿಸಲಾಯಿತು. 

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಿ ಅಂಗಡಿ, ಉಪಾಧ್ಯಕ್ಷ ಚಂದ್ರಶೇಖರ ಪಾಟೀಲ, ಸದಸ್ಯೆ ಅನುಸೂಯಾ ಜಾಧವ, ಜಿಲ್ಲಾಧಿಕಾರಿ ಶಿವಯೋಗಿ ಕಳಸದ, ಜಿಲ್ಲಾ ಬಿಸಿಎಂ ಅಧಿಕಾರಿ ಎಚ್.ಎಂ. ಪೂಜಾರಿ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ದೊಡಮನಿ ಉಪಸ್ಥಿತರಿದ್ದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT