ADVERTISEMENT

ಇಲಾಖೆಗಳಿಗೆ ಕ್ರೀಡಾಕೂಟ ಕಡ್ಡಾಯವಾಗಲಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2012, 19:30 IST
Last Updated 9 ಮಾರ್ಚ್ 2012, 19:30 IST

ದಾವಣಗೆರೆ: ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ವಾರ್ಷಿಕ ಕ್ರೀಡಾಕೂಟ ಕಡ್ಡಾಯಗೊಳಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಗರದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭಗೊಂಡ ದ್ವಿತೀಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಹುತೇಕ ಸರ್ಕಾರಿ ನೌಕರರು ಆಲಸ್ಯ ಮೈಗೂಡಿಸಿಕೊಂಡಿರುತ್ತಾರೆ. ಇದನ್ನು ಹೋಗಲಾಡಿಸಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಅಗತ್ಯ. ಕ್ರೀಡಾ ಮನೋಭಾವದಿಂದ ಕ್ರಿಯಾಶೀಲತೆ ಬೆಳೆಯುತ್ತದೆ ಎಂದರು.

ಬದಲಾದ ಜೀವನಶೈಲಿಯ ಪರಿಣಾಮ, 40 ವರ್ಷ ವಯಸ್ಸಿನ ಆಸುಪಾಸಿನಲ್ಲಿಯೇ ರಕ್ತದೊತ್ತಡ, ಮಧುಮೇಹ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದನ್ನು ತಡೆದು, ಆರೋಗ್ಯ ಸುಧಾರಿಸಿಕೊಳ್ಳಲು ಕ್ರೀಡೆ ಅಗತ್ಯ ಎಂದರು.

ಕ್ರೀಡಾಕೂಟ ಉದ್ಘಾಟಿಸಿದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಎ.ಸಿ. ಜಯಣ್ಣ, ಎಷ್ಟೇ ಹಣ ಖರ್ಚು ಮಾಡಿದರೂ ಮಾಲಿನ್ಯ ಪ್ರಮಾಣ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಇತರ ಕೆಲಸಗಳಿಗೆ ಕೋಟಿಗಟ್ಟಲೆ ವ್ಯಯ ಮಾಡುವ ಬದಲಿಗೆ, ಹಲವು ರೋಗಗಳಿಗೆ ಕಾರಣವಾಗುತ್ತಿರುವ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬೇಕು ಎಂದರು.

ಮೇಯರ್ ಎಚ್.ಎನ್. ಗುರುನಾಥ್ ಮಾತನಾಡಿ, ನಗರದಲ್ಲಿ ಮಂಡಕ್ಕಿ ಬಟ್ಟಿಗಳು ಮತ್ತಿತರ ಕಾರಣದಿಂದ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಹೆಚ್ಚಿನ ಗಮನಹರಿಸಲಿ ಎಂದು ಆಶಿಸಿದರು.

ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಮಾತನಾಡಿದರು. ಮಂಡಳಿಯ ಹಿರಿಯ ಪರಿಸರ ಅಧಿಕಾರಿ ನಂದಕುಮಾರ್ ಸ್ಪರ್ಧಿಗಳ ಪರವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಿಐಇಟಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್. ಮಂಜಪ್ಪ ಉಪಸ್ಥಿತರಿದ್ದರು.

ಮಂಡಳಿಯ ಸದಸ್ಯಕಾರ್ಯದರ್ಶಿ ಎಸ್.ಎಂ. ಪುಟ್ಟಬುದ್ಧಿ ಸ್ವಾಗತಿಸಿದರು. ಅಧ್ಯಕ್ಷ ಎ.ಎಸ್. ಸದಾಶಿವಯ್ಯ ಪ್ರಾಸ್ತಾವಿಕ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.