ADVERTISEMENT

ಎಸಿಎಫ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಮೇ 2012, 19:30 IST
Last Updated 10 ಮೇ 2012, 19:30 IST
ಎಸಿಎಫ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
ಎಸಿಎಫ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ   

ಕಾರವಾರ: ದಾಂಡೇಲಿ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮದನ ನಾಯಕ ಅವರ ಹತ್ಯೆ ಖಂಡಿಸಿ ಎಲ್ಲ ಸಮಾಜದ ಪ್ರಮುಖರು ಅಂಕೋಲಾ ಪಟ್ಟಣದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಾಯಕ ಅವರ ಹತ್ಯೆಗೆ ಕಾರಣರಾದವರನ್ನು ಬಂಧಿಸಿ, ಶಿಕ್ಷೆ ವಿಧಿಸುವುದಷ್ಟೇ ಅಲ್ಲ ಸಾರ್ವಜನಿಕ ಸ್ಥಳದಲ್ಲಿ ಅವರನ್ನು ಗಲ್ಲಿಗೇರಿಸಬೇಕು ಎಂದು ಅಂಕೋಲಾ ತಾಲ್ಲೂಕಿನ ನಾಗರಿಕರು ಆಗ್ರಹಿಸಿದರು.

ಅಂಕೋಲಾ ಬಸ್ ನಿಲ್ದಾಣ ಸಮೀಪ ವೃತ್ತದಲ್ಲಿ ಜಮಾಯಿಸಿದ ನೂರಾರು ಜನರು ಪೊಲೀಸ್ ಇಲಾಖೆಯ ವಿಳಂಬ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಕಾಂಗ್ರೆಸ್ ಪಕ್ಷದ ಮುಖಂಡ ರಮಾನಂದ ನಾಯಕ ಮಾತನಾಡಿ, ಪೊಲೀಸರು ಸಮಯ ಪ್ರಜ್ಞೆ ಮೆರೆದಿದ್ದಲ್ಲಿ ಎಸಿಎಫ್ ನಾಯಕ ಅವರ ಸಾವು ತಪ್ಪಿಸಬಹುದಿತ್ತು. ಠಾಣೆಗೆ ಬಂದಾಗ ನಾಯಕ ಅವರು ನೀಡಿದ ದೂರು ದಾಖಲಿಸಿಕೊಳ್ಳದೇ ಇರುವುದನ್ನು ನೋಡಿದರೆ ಜಿಲ್ಲೆಯಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ ಎನ್ನುವುದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉದಯ ನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಗೆ. ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂದಾದರೆ ಜನಸಾಮಾನ್ಯರ ರಕ್ಷಣೆ ಯಾರಿಂದ ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಪೊಲೀಸ್ ಇಲಾಖೆ ಯಾವುದೇ ಪ್ರಭಾವಕ್ಕೆ ಒಳಗಾಗದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ನಾಯ್ಕ ಆಗ್ರಹಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಸರಸ್ವತಿ ಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧಕ್ಷೆ ಸುಜಾತಾ ಗಾಂವಕರ, ಪುರುಷೋತ್ತಮ ನಾಯ್ಕ, ಸಂದೀಪ ನಾಯಕ, ರಾಜೇಂದ್ರ ನಾಯಕ, ಶಾಂತಾರಾಮ ನಾಯಕ ಮುಂತಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.