ADVERTISEMENT

ಏಕರೂಪದ ಶಿಕ್ಷಣ ಕಡ್ಡಾಯವಾಗಬೇಕು

​ಪ್ರಜಾವಾಣಿ ವಾರ್ತೆ
Published 17 ಮೇ 2012, 19:30 IST
Last Updated 17 ಮೇ 2012, 19:30 IST

ಶಿವಮೊಗ್ಗ: ಪ್ರತಿಯೊಬ್ಬ ವಿದ್ಯಾರ್ಥಿಗೂ ಏಕರೂಪದ ಶಿಕ್ಷಣ ಸಿಗಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪ್ರಜಾಯತ್ನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ~ಜಿಲ್ಲಾ ಶೈಕ್ಷಣಿಕ ಪ್ರಜಾ ವರದಿ~ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಏಕರೂಪದ ಶಿಕ್ಷಣದಿಂದ ವಿದ್ಯಾರ್ಥಿಗಳ ನಡುವಿನ ಶೈಕ್ಷಣಿಕ ಅಂತರ ಕಡಿಮೆಯಾಗುತ್ತದೆ. ಗ್ರಾಮೀಣ-ನಗರ ಸೇರಿದಂತೆ ಎಲ್ಲ ರೀತಿಯ ಸರ್ಕಾರಿ-ಖಾಸಗಿ ಶಾಲೆಗಳಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು ಎಂದರು.

ಸದೃಢ ಸಮಾಜಕ್ಕೆ ಶಿಕ್ಷಣ, ಆರೋಗ್ಯ ಎರಡೂ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರಗಳು ಹಲವು ಉತ್ತಮ ಯೋಜನೆಗಳನ್ನು ಜಾರಿಗೊಳಿಸಿವೆ. ಆದರೆ, ಅವುಗಳನ್ನು ಅನುಷ್ಠಾನಗೊಳಿಸಬೇಕಾದವರಲ್ಲಿ ಸೇವಾಮನೋಭಾವ ಮತ್ತು ಬದ್ಧತೆ ಕಡಿಮೆಯಾಗಿದೆ. ಹಾಗಾಗಿ, ಎಂತಹ ಯೋಜನೆಗಳನ್ನು ರೂಪಿಸಿದರೂ ಅದು ಪ್ರಯೋಜನವಾಗುತ್ತಿಲ್ಲ ಎಂದು ವಿಷಾದಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕ ಗುಣಮಟ್ಟ ಅಭಿವೃದ್ಧಿಪಡಿಸಲು ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇದರ ಪರಿಣಾಮಕಾರಿ ಅನುಷ್ಠಾನಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಹಾಗೂ ಸಮುದಾಯದ ಸಹಕಾರ ಅತ್ಯಗತ್ಯ ಎಂದು ಅವರು ಸಲಹೆ ನೀಡಿದರು.

ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಬಿ. ಗೀತಾ ಮಲ್ಲಿಕಾರ್ಜುನ್ ಮಾತನಾಡಿ, ಅಭಿವೃದ್ಧಿಗೆ ಶಿಕ್ಷಣವೇ ಆಳತೆ ಗೋಲು ಎಂದರು. 

ಮಾಹದೇವ ಪ್ರಾಸ್ತಾವಿಕ ಭಾಷಣ ಮಾಡಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಎಚ್. ಗಂಗಾಧರಪ್ಪ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಈಶ್ವರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.