ಬಳ್ಳಾರಿ: ಜಿಲ್ಲಾ ನ್ಯಾಯಾಲಯ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರವು ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಆರಂಭಿಸಿರುವ ಕಾನೂನು ಸಾಕ್ಷರತಾ ರಥಯಾತ್ರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುರುವಾರ ಜಿಲ್ಲಾ ನ್ಯಾಯಾಧೀಶೆ ಎಂ.ಜಿ. ಉಮಾ ಹಸಿರುನಿಶಾನೆ ತೋರಿದರು.
ಸಾರ್ವಜನಿಕರಲ್ಲಿ ಕಾನೂನಿನ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಸಾಕ್ಷರತಾ ರಥವು ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಒಟ್ಟು 24 ದಿನಗಳ ಕಾಲ ಸಂಚರಿಸಲಿದೆ ಎಂದು ಅವರು ಹೇಳಿದರು.
ಆಯಾ ಗ್ರಾಮಗಳಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಸಾರ್ವಜನಿಕರಿಗೆ ಉಚಿತ ಕಾನೂನು ತರಬೇತಿಯನ್ನೂ ನೀಡಲಾಗುತ್ತದೆ. ಪ್ರತಿಯೊಬ್ಬರೂ ಸಾಮಾನ್ಯ ಕಾನೂನುಗಳನ್ನು ಅರಿತುಕೊಂಡರೆ ಸಮಸ್ಯೆಗೆ ಸುಲಭವಾಗಿ ಪರಿಹಾರವನ್ನು ಕಂಡುಕೊಳ್ಳಬಹುದು.
ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಸಾಕ್ಷರತಾ ರಥದ ಮೂಲಕ ಆಯಾ ಗ್ರಾಮಗಳಲ್ಲಿ ತಲಾ ಮೂರು ಕಾರ್ಯಕ್ರಮಗಳನ್ನು ನಡೆಸಲಾಗುವುದು. ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವ ಉದ್ದೇಶವನ್ನು ಹೊತ್ತು ಸಂಚರಿಸುವ ಈ ರಥದ ಸದುಪಯೋಗ ಪಡೆದುಕೊಳ್ಳಬೇಕು. ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅವರು ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೊಸಮನಿ ಸಿದ್ಧಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ಜಿ. ಶಿವಕುಮಾರ್, ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಎಸ್. ಬದ್ರಿನಾಥ, ವಿದ್ಯಾರ್ಥಿಗಳು, ವಕೀಲರು, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.