ADVERTISEMENT

‘ಕಾಳುಮೆಣಸು’: ಮುಖ್ಯಮಂತ್ರಿ ಬಳಿಗೆ ನಿಯೋಗ– ಕಾಂಗ್ರೆಸ್‌ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2017, 7:17 IST
Last Updated 6 ನವೆಂಬರ್ 2017, 7:17 IST

ಮಡಿಕೇರಿ: ಕಾಳುಮೆಣಸು ಆಮದು ಮಾಡದಿರಲು ಹಾಗೂ ಜಿಲ್ಲೆಯ ಜಮ್ಮಬಾಣೆ ಸಮಸ್ಯೆಯನ್ನು ಪರಿಹರಿಸಲು ಒತ್ತಾಯಿಸಿ ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ಕಾಂಗ್ರೆಸ್‌ ನಿರ್ಧರಿಸಿದೆ.

ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಶಿವುಮಾದಪ್ಪ ಮಾತನಾಡಿ, ‘ಇತ್ತೀಚೆಗೆ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಗೋಣಿಕೊಪ್ಪಲು ಆರ್‌ಎಂಸಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ ಹಾಗೂ ಜಮ್ಮಬಾಣೆ ಸಮಸ್ಯೆ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಮುಖ್ಯಮಂತ್ರಿ ಬಳಿಗೆ ಮುಖಂಡರ ಸಮ್ಮುಖದಲ್ಲಿ ನಿಯೋಗ ತೆರಳಿ ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಗುವುದು’ ಎಂದು ಮಾಹಿತಿ ನೀಡಿದರು.

8ಕ್ಕೆ ಕರಾಳ ದಿನ: ಕೇಂದ್ರ ಸರ್ಕಾರ ನೋಟು ನಿಷೇಧ ಮಾಡಿದ ನ. 8ರಂದು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಕೆಪಿಸಿಸಿಯಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲು ಆದೇಶ ಬಂದಿದ್ದು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಅಂದು ಕಾಲ್ನಡಿಗೆ ಜಾಥಾ ಸಹ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಸಚಿವ ರಮಾನಾಥ್ ರೈ ಜಾಥಾಕ್ಕೆ ಚಾಲನೆ ನೀಡುವರು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಕೋರಿದರು. ಇತ್ತೀಚೆಗೆ ನಡೆದ ಸಭೆಯಲ್ಲಿ ಪಕ್ಷದ ನೂತನ ಜಿಲ್ಲಾ ವಕ್ತಾರರನ್ನಾಗಿ ಪಕ್ಷದ ಹಿರಿಯರಾದ ಅಯ್ಯಪ್ಪ ಅವರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮನೆಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಮೂಲಕ ನಗರಸಭೆಯ ಅಧ್ಯಕ್ಷರು ಹಾಗೂ ಸದಸ್ಯರು ಎಲ್ಲ ಮನೆಗಳಿಗೆ ಭೇಟಿ ನೀಡುವ ಮೂಲಕ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ.

ಗಂಭೀರ ಸಮಸ್ಯೆಯಾಗಿ ಪರಿಣಮಿಸಿರುವ ನಗರದ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯವನ್ನು ಶೀಘ್ರದಲ್ಲಿ ಮಾಡುವುದಾಗಿ ಅಧ್ಯಕ್ಷರು ಭರವಸೆ ನೀಡಿದ್ದಾರೆ ಎಂದು ಶಿವುಮಾದಪ್ಪ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಅಪ್ರು ರವೀಂದ್ರ, ನಗರ ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.