ADVERTISEMENT

ಕುಡಿಯುವ ನೀರಿಗೆ ಆಗ್ರಹಿಸಿ ಹೆದ್ದಾರಿ ತಡೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2012, 19:30 IST
Last Updated 13 ಏಪ್ರಿಲ್ 2012, 19:30 IST

ಕಮಲಾಪುರ:  ಗುಲ್ಬರ್ಗ ತಾಲ್ಲೂಕಿನ ಮುತ್ಯಾನ ಬಬಲಾದ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಶುಕ್ರವಾರ ಸಿರಗಾಪುರ ವೃತ್ತದ ಸಮೀಪದಲ್ಲಿರುವ ರಾಜ್ಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಐದು ಸಾವಿರ ಜನಸಂಖ್ಯೆಯಿದ್ದು, ಕುಡಿಯುವ ನೀರಿನ ತೊಂದರೆಯಿಂದ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ಇಲ್ಲಿನ ಜನರು ಹಗಲು ರಾತ್ರಿ ನೀರಿಗಾಗಿ ಅಲೆದಾಡಿದರೂ ಕುಡಿಯಲು ಒಳ್ಳೆಯ ನೀರು ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಬಲಾದ ಗ್ರಾಮದ ಸುತ್ತಲಿನ ಕಗ್ಗನಮಡಿ, ಕಣ್ಣೂರ, ಭೂಸಣಗಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿಯೂ ಇದೇ ಪರಿಸ್ಥಿತಿ ಉದ್ಭವಿಸಿದೆ. ಸಚಿವ ರೇವುನಾಯಕ ಬೆಳಮಗಿ ಹಾಗೂ ಅವರ ಪುತ್ರ ಜಿಲ್ಲಾ ಪಂಚಾಯಿತಿ ಸದಸ್ಯ ಗಣೇಶ ಬೆಳಮಗಿ ಅವರು ಇದೇ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದರು.

ಪ್ರತಿಭಟನೆಗೆ ಮಣಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ, ಗ್ರಾಮಕ್ಕೆ ಟ್ಯಾಂಕರ್ ಮೂಲಕ  ನೀರು ಸರಬರಾಜು ಮಾಡುವ ಭರವಸೆ ನೀಡಿದರು. ಅಲ್ಲದೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಲಿಖಿತ ಭರವಸೆ  ನೀಡಿದರು.

ಜೆಡಿಎಸ್ ಜಿಲ್ಲಾ ಮುಖಂಡರಾದ ಸೂರ್ಯಕಾಂತ ನಿಂಬಾಳಕರ್, ಬಬಲಾದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶ್ವರ, ಜಗನ್ನಾಥ ಶೇಖರ, ಮಂಜುನಾಥ ಹೋಳ್ಕರ್ ಮತ್ತು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.