ADVERTISEMENT

ಕುಡಿವ ನೀರಿಗೆ ಆಗ್ರಹಿಸಿ ಧರಣಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2011, 19:30 IST
Last Updated 28 ಅಕ್ಟೋಬರ್ 2011, 19:30 IST

ಶ್ರೀನಿವಾಸಪುರ: ರಾಜ್ಯದಲ್ಲಿ ಭ್ರಷ್ಟಾಚಾರ ತಡೆಯುವಂತೆ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಸರ್ಕಾರವನ್ನು ಆಗ್ರಹಿಸಿ ತಾಲ್ಲೂಕು ಯುವ ಕಾಂಗ್ರೆಸ್ ಸದಸ್ಯರು ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.

  ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ವೆಂಕಟಾಚಲಪತಿ  ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಬಡವರು ಮತ್ತು ಮಧ್ಯಮ ವರ್ಗದ ಜನರ ಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಕೆಲವು ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಇದೆ. ಅದಕ್ಕೆ ಕಾರಣ ಏನೇ ಇರಬಹುದು. ಸರ್ಕಾರ ನಾಗರಿಕರಿಗೆ ಸಮರ್ಪಕ ಕುಡಿಯುವ ನೀರನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

 ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಟಿ.ಜಯರಾಮ್ ಅವರಿಗೆ ನೀಡಿದರು. ಮುಖಂಡರಾದ ನಾಗಭೂಷಣ, ವೆಂಕಟಾದ್ರಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.