ADVERTISEMENT

ಕುಣಿಗಲ್: 13 ಸಾವಿರ ನಿವೇಶನ ರಹಿತರು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2012, 19:30 IST
Last Updated 8 ಆಗಸ್ಟ್ 2012, 19:30 IST

ಕುಣಿಗಲ್: ತಾಲ್ಲೂಕಿನಲ್ಲಿ 13 ಸಾವಿರ ನಿವೇಶನ ರಹಿತರನ್ನು ಗುರುತಿಸಲಾಗಿದ್ದು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಪಿಡಿಒ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆ ಯಶಸ್ವಿಗೆ ಸಹಕರಿಸುವಂತೆ ಶಾಸಕ ಬಿ.ಬಿ.ರಾಮಸ್ವಾಮಿಗೌಡ ಸೂಚಿಸಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಬುಧವಾರ ನಡೆದ ವಸತಿ ಯೋಜನೆಯ ಜಾಗೃತಿ ಸಮಿತಿ ಸಭೆಯಯಲ್ಲಿ ಮಾತನಾಡಿ, ತಹಶೀಲ್ದಾರ್ ತಾಲ್ಲೂಕಿನ ವಿವಿಧೆಡೆ ಸರ್ಕಾರಿ ಜಮೀನು ಗುರುತಿಸಿ ಸ್ವಾಧೀನಪಡಿಸಿಕೊಂಡು ನಿವೇಶನ ಹಂಚಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಡಾ.ಬಿ.ಎನ್.ರವಿ ಮಾತನಾಡಿ, ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಉಮಾ ವೆಂಕಟೇಶ್ ಮಾತನಾಡಿ, ಹುಲಿಯೂರುದುರ್ಗ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅರ್ಹ ಫಲಾನುಭವಿಗಳ ಪಟ್ಟಿಯನ್ನು ಆಯ್ಕೆ ಮಾಡುವಲ್ಲಿ ವಿಫಲರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪಾರದರ್ಶಕ ನೀತಿ ಅನುಸರಿಸಿ ಆಯ್ಕೆ ಪಟ್ಟಿ ನೀಡಬೇಕು ಎಂದು ಸೂಚಿಸಿದರು.

ತಹಶೀಲ್ದಾರ್ ಎನ್.ಸಿ.ಜಗದೀಶ್ ಮಾತನಾಡಿ, ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 52 ಎಕರೆ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ಕಾನೂನು ಬದ್ಧವಾಗಿ ಕ್ರಮ ತೆಗೆದುಕೊಂಡು ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.ಅಧ್ಯಕ್ಷ ಕೆ.ಎಲ್.ರಾಮಣ್ಣ, ಕಾರ್ಯ ನಿರ್ವಹಣಾಧಿಕಾರಿ ವೆಂಕಟರಾಮು, ವಸತಿ ಯೋಜನೆಯ ನೋಡಲ್ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.