ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಮಹಾರಾಷ್ಟ್ರದ ಕೊಯ್ನಾ ಆಣೆಕಟ್ಟೆಯಿಂದ ನಾಲ್ಕು ಟಿಎಂಸಿ ನೀರು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿದ್ದು, ನೀರು ಬಿಡುಗಡೆಗೆ ಆ ರಾಜ್ಯ ಸಮ್ಮತಿಸಿದೆ ಎಂದರು.
ಕೊಯ್ನಾದಿಂದ ಎರಡು ಹಂತದಲ್ಲಿ ಎರಡೆರಡು ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತದೆ, ಪ್ರತಿ ಟಿಎಂಸಿ ನೀರಿಗೆ ಮೂರು ಕೋಟಿ ರೂಪಾಯಿ ಸಂದಾಯ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಅಂತಿಮ ಮಾತುಕತೆ ನಡೆಸಲಿದ್ದು, ಒಂದೆರಡು ದಿನದಲ್ಲಿ ರಾಜ್ಯಕ್ಕೆ ನೀರು ಬರಲಿದೆ. ಇದರಿಂದ ಬೆಳಗಾವಿ, ವಿಜಾಪುರ, ಬಾಗಲಕೋಟೆ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದಿಂದ ಹೆಚ್ಚಿನ ನೀರು ಬಿಡುಗಡೆ ಸಂಬಂಧ ಅಲ್ಲಿನ ಸರ್ಕಾರದ ಮನವೊಲಿಸಲು ರಾಜ್ಯದ ಕೇಂದ್ರ ಸಚಿವರು ಮುಂದಾಗಬೇಕು ಎಂದೂ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.