ADVERTISEMENT

ಗಣತಂತ್ರ ವ್ಯವಸ್ಥೆ ಸದೃಢಗೊಳಿಸಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2012, 19:30 IST
Last Updated 26 ಜನವರಿ 2012, 19:30 IST

ರಾಯಚೂರು: ನಮ್ಮ ದೇಶದ ಸಂಸ್ಕೃತಿ, ಪರಂಪರೆ ಹಾಗೂ ಸಂವಿಧಾನದ ಆಶಯದಂತೆ ಗಣತಂತ್ರ ವ್ಯವಸ್ಥೆಯನ್ನು ಸಧೃಡಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಹೇಳಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಗಣರಾಜ್ಯೋತ್ಸವ ಸಮಿತಿಯು ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದ ಏಕತೆ ಮತ್ತು ಸಾಮರಸ್ಯ ಕಾಪಾಡುವ ಗುರುತರ ಹೊಣೆಗಾರಿಕೆ ಈ ದೇಶದ ಪ್ರತಿಯೊಬ್ಬ ಯುವಕರ ಮೇಲಿದೆ ಎಂದು ತಿಳಿಸಿದರು.

ಹಿರಿಯರು ಹಾಕಿಕೊಟ್ಟ ಸತ್ಯ, ಅಹಿಂಸೆ, ಪರಧರ್ಮ ಸಹಿಷ್ಣುತೆಯಂತಹ ತತ್ವಗಳ ಹಾದಿಯಲ್ಲಿ ಸಾಗಿ ದೇಶವನ್ನು ಮುನ್ನಡೆಸೋಣ ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ಕೈಗೊಂಡ ಕೆಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ವಿವರಿಸಿದರು. ಈಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇದೆ. ಗ್ರಾಮೀಣ ಪ್ರದೇಶದ ಜನರಿಗೆ ಕುಡಿವ ಶುದ್ಧ ನೀರು ಪೂರೈಕೆ ಮಾಡುವುದು ಮತ್ತು ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಶಾಸಕ ಸಯ್ಯದ್ ಯಾಸಿನ್ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್.ಶಂಕರಪ್ಪ ವಕೀಲ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಧಾಕೃಷ್ಣ ಮದನಕರ್, ನಗರಸಭೆ ಅಧ್ಯಕ್ಷೆ ಮಮತಾ ಸುಧಾಕರ, ಜಿಲ್ಲಾ ಪೊಲೀಸ್ ವರಿಷ್ಠ ಎನ್.ಶಶಿಕುಮಾರ, ಸಹಾಯಕ ಆಯುಕ್ತ ತಿಮ್ಮಪ್ಪ, ತಹಸೀಲ್ದಾರ ಅಶೋಕ ಜಹಗೀರದಾರ್ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವರನ್ನು ಸತ್ಕರಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.