ADVERTISEMENT

ಗುಳೆ ತಡೆಯಲು ಉದ್ಯೋಗ ಖಾತ್ರಿ ಸಹಕಾರಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ನಾಯಕನಹಟ್ಟಿ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಡೆಗಟ್ಟಲು ಸಹಕಾರಿಯಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ತಿಪ್ಪೇಸ್ವಾಮಿ ಹೇಳಿದರು.

ಸಮೀಪದ ಎನ್.ಮಹದೇವಪುರದಲ್ಲಿ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆಯು ತಾಲ್ಲೂಕಿನಲ್ಲಿ ಮಂದ ಗತಿಯಲ್ಲಿ ಸಾಗುತ್ತಿರುವುದು ವಿಷಾದನೀಯ. ಇದಕ್ಕೆ ಕಾರಣಗಳೇನೇ ಇರಬಹುದು ಹೆಚ್ಚು ಕೆಲಸವನ್ನು ಕಾರ್ಮಿಕರಿಗೆ ನೀಡಬೇಕು. ಈ ಯೋಜನೆಯಲ್ಲಿ ಅನೇಕ ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ ಎಂದು ಅವರು ಸಲಹೆ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಪಾಲಾಕ್ಷ ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಲು ಶಾಲಾ ಆರೋಗ್ಯ ಅಭಿಯಾನ ಪ್ರಾರಂಭಿಸಲಾಗಿದೆ. ಇದಕ್ಕೆ ರಾಜ್ಯದಲ್ಲಿ ಗದಗ ಜಿಲ್ಲೆಯ ಮುಂಡರಗಿ ಮತ್ತು ಚಳ್ಳಕೆರೆ ತಾಲ್ಲೂಕುಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ.  ಯೋಜನೆ ಈಗಾಗಲೇ ಆರಂಭವಾ ಗಿದೆ ಎಂದು ತಿಳಿಸಿದರು.

ಕುದಾಪುರದ ಉಪ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಸಹಾಯಕಿ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದರು. ಇದಕ್ಕೆ ಉತ್ತರಿಸಿದ ವೈದ್ಯಾಧಿಕಾರಿ, ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಳಿಕ ಕಾಯಂ ಸಿಬ್ಬಂದಿ ನೇಮಿಸಲಾಗುವುದು ಎಂದು ಭರವಸೆ ನೀಡಿದರು.

ತಹಶೀಲ್ದಾರ್ ಡಿ.ಕೆ. ರಾಮಚಂದ್ರಪ್ಪ, ತಾಲ್ಲೂಕು ಪಂಚಾಯ್ತಿ ಸದಸ್ಯ ಬಸವರಾಜ್, ತಿಪ್ಪೇಶ್‌ಕುಮಾರ್ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎ. ತಿಮ್ಮಣ್ಣ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.