ADVERTISEMENT

ಚೆಕ್‌ಡ್ಯಾಮ್ ನಿರ್ಮಾಣಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2011, 20:25 IST
Last Updated 21 ಜನವರಿ 2011, 20:25 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಸಾವಿರ ಅಡಿಗೆ ಕುಸಿದಿದ್ದು, ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಚೆಕ್‌ಡ್ಯಾಮ್‌ಗಳನ್ನು ನಿರ್ಮಿಸಬೇಕಾದ ಅಗತ್ಯವಿದೆ. ಬೆಟ್ಟಗಳಿಂದ ಹರಿಯುವ ನೀರನ್ನು ತಡೆಗಟ್ಟುವಲ್ಲಿ ಚೆಕ್‌ಡ್ಯಾಮ್ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಪಿ.ಬಚ್ಚೇಗೌಡ ತಿಳಿಸಿದರು.

ತಾಲ್ಲೂಕಿನ ಆವಲಗುರ್ಕಿ ವ್ಯಾಪ್ತಿಯಲ್ಲಿನ ಬೆಟ್ಟಗಳಿಂದ ಹರಿಯುವ ನೀರನ್ನು ತಡೆದು ಸದ್ಬಳಕೆ ಮಾಡುವ ಉದ್ದೇಶದಿಂದ 13 ಲಕ್ಷ ರೂಪಾಯಿ ವೆಚ್ಚದ ಚೆಕ್ ಡ್ಯಾಮ್ ನಿರ್ಮಾಣ ಕಾರ್ಯಕ್ಕೆ ಇತ್ತೀಚೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಚೆಕ್ ಡ್ಯಾಮ್ ನಿರ್ಮಾಣದಿಂದ ಎಲ್ಲರಿಗೂ ಪ್ರಯೋಜನವಾಗಲಿದೆ’ ಎಂದರು.

ಬೇಸಿಗೆ ಕಾಲದ ಸಂದರ್ಭದಲ್ಲಿ ನೀರಿನ ಸಮಸ್ಯೆ ನಿವಾರಿಸಲು ಸಾಧ್ಯವಾಗುತ್ತದೆ. ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತದೆ. ನಿರ್ಮಾಣ ಕಾರ್ಯದ ಗುಣಮಟ್ಟ ಪರಿಶೀಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ತಿಳಿಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ವಿ.ಶ್ರೀರಾಮುಲು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿಯಪ್ಪ, ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ  ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.