ADVERTISEMENT

ತಮಿಳುನಾಡಿನ ಕ್ರಮ ಅಮಾನವೀಯ- ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2012, 19:30 IST
Last Updated 14 ಅಕ್ಟೋಬರ್ 2012, 19:30 IST

ಮಡಿಕೇರಿ: ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರಿಗಾಗಿ ತಮಿಳುನಾಡು ಕಾನೂನು ಹೋರಾಟ ನಡೆಸುವ ಮೂಲಕ ಅಮಾನವೀಯವಾಗಿ ವರ್ತಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ಭಾನುವಾರ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ರಾಜ್ಯದ ಪರಿಸ್ಥಿತಿ ಬಗ್ಗೆ ಅನುಕಂಪ ತೋರಿಸುವ ಬದಲು ಕೇಂದ್ರದ ಕಾವೇರಿ ನದಿ ಪ್ರಾಧಿಕಾರದ ಮೂಲಕ ತಮಿಳುನಾಡು ಸರ್ಕಾರ ನಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದರು.

ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಗೌಡ ಹಾಗೂ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಕಾವೇರಿಗೆ ಪೂಜೆ ಸಲ್ಲಿಸಿದ ಬಳಿಕ ಧಾರಾಕಾರ ಮಳೆ ಸುರಿಯಿತು.

ಇದಕ್ಕೂ ಮುಂಚೆ ಕುಮಾರಸ್ವಾಮಿ ಹಾಗೂ ಕುಟುಂಬದವರು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಮತ್ತು ಭಗಂಡೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ತುಲಾ ಸಂಕ್ರಮಣದ ಸಂದರ್ಭದಲ್ಲಿ ಭಗಂಡೇಶ್ವರ ದೇವಸ್ಥಾನದಲ್ಲಿ ಬೆಳಗುವ ನಂದಾದೀಪಕ್ಕೆ ಕುಮಾರಸ್ವಾಮಿ ದಂಪತಿ ಚಾಲನೆ ನೀಡಿದರು. ಇದರ ಜೊತೆಗೆ ಅಕ್ಷಯಪಾತ್ರೆಗೆ ಅಕ್ಕಿಯನ್ನು ತುಂಬಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.