ADVERTISEMENT

ದಲಿತರ ಮೇಲೆ ದೌರ್ಜನ್ಯಕ್ಕೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ಹೊಳಲ್ಕೆರೆ: ಮಂಡ್ಯ ಜಿಲ್ಲೆಯಲ್ಲಿ ಈಚೆಗೆ ದಲಿತರ ಮೇಲೆ ನಡೆದ ದೌರ್ಜನ್ಯ ಘಟನೆಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಬಿ.ಬಿ. ಸರೋಜಾ ಅವರಿಗೆ ಮನವಿಪತ್ರ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ ಕೆಂಗುಂಟೆ ಜಯಪ್ಪ ಮಾತನಾಡಿ, ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ರಾಜ್ಯ ಸರ್ಕಾರವಾಗಲೀ, ಜಿಲ್ಲೆ, ತಾಲ್ಲೂಕು ಆಡಳಿತಗಳಾಗಲೀ ಕ್ರಮ ಕೈಗೊಳ್ಳುತ್ತಿಲ್ಲ. ಮಂಡ್ಯ ಜಿಲ್ಲೆಯ ಕಸವನಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ತಮಟೆ ಬಡಿಯಲಿಲ್ಲ ಎಂಬ ಕಾರಣಕ್ಕೆ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಸ್ಥಳೀಯ ಶಾಸಕ ಸುರೇಶ್ ಕುಮಾರ್ ಗ್ರಾಮದಲ್ಲೇ ಈ ಘಟನೆ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದರು. ಘಟನೆಗೆ ಕಾರಣರಾದ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ಅಭದ್ರತೆಯ ಜೀವನ ನಡೆಸುತ್ತಿರುವ ದಲಿತರಿಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಸ್ತೂರಪ್ಪ, ಆರ್. ಶಿವಕುಮಾರ್, ಕುಮಾರ್, ಸುಂದರಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.