ADVERTISEMENT

ಪಲ್ಸ್ ಪೋಲಿಯೊ: ಶೇ 92ರಷ್ಟು ಸಾಧನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2012, 19:30 IST
Last Updated 19 ಫೆಬ್ರುವರಿ 2012, 19:30 IST

ಮಂಡ್ಯ: ಜಿಲ್ಲೆಯಲ್ಲಿ ಭಾನುವಾರ ನಡೆದ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಕಾರ್ಯಕ್ರಮ ಶೇ 92ರಷ್ಟು ಯಶಸ್ಸು ಕಂಡಿದ್ದು, ಈ ವರ್ಷದ ಒಟ್ಟು 1,74,446 ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ 1,92,085 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿಯನ್ನು ಜಿಲ್ಲಾಡಳಿತ ಹಮ್ಮಿಕೊಂಡಿತ್ತು. ಇದಕ್ಕಾಗಿ ಪ್ರಾಥಮಿಕಆರೋಗ್ಯ ಕೇಂದ್ರಗಳು, ಆಸ್ಪತ್ರೆಗಳ ಜೊತೆಗೆ ಜನ ಸಂಚಾರ ಹೆಚ್ಚಿರುವ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿಯೂ ಸಿಬ್ಬಂದಿಯನ್ನು ನಿಯೋಜಿಸಿತ್ತು.

ತಾಲ್ಲೂಕುವಾರು ಅಂಕಿ ಅಂಶಗಳನ್ನು ಗಮನಿಸಿದರೆ ಶ್ರೀರಂಗಪಟ್ಟಣ, ಮಳವಳ್ಳಿ ಮತ್ತು ನಾಗಮಂಗಲ ತಾಲ್ಲೂಕಿನಲ್ಲಿ ಉತ್ತಮ ಸಾಧನೆಯಾಗಿದ್ದು, ಶೇ 96ರಷ್ಟು ಯಶಸ್ವಿಯಾಗಿದೆ. ಮಂಡ್ಯ ತಾಲ್ಲೂಕಿನಲ್ಲಿ ಕನಿಷ್ಠ ಅಂದರೆ ಶೇ 86ರಷ್ಟು ಯಶಸ್ವಿಯಾಗಿದೆ.

ಉಳಿದಂತೆ ಮದ್ದೂರು ತಾಲ್ಲೂಕಿನಲ್ಲಿ ಶೇ 94,  ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಶೇ 93 ಮತ್ತು ಪಾಂಡವಪುರ ತಾಲ್ಲೂಕಿನಲ್ಲಿ ಶೇ 94ರಷ್ಟು ಸಾಧನೆಯಾಗಿದೆ ಎಂದುಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ತಾಲ್ಲೂಕು ದೇವೇಗೌಡನದೊಡ್ಡಿಯ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಶಾಸಕ ಎಂ. ಶ್ರೀನಿವಾಸ್ ಮತ್ತು ಜಿಲ್ಲಾಧಿಕಾರಿ ಡಾ. ಪಿ.ಸಿ.ಜಾಫರ್ ಚಾಲನೆ ನೀಡಿದರು.

ಸಾಂಕೇತಿಕವಾಗಿ ಎರಡು ಶಿಶುಗಳಿಗೆ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅರುಣ್‌ಕುಮಾರ್, ಆಯುಕ್ತ ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಧರ್, ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಮತ್ತು ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.