ADVERTISEMENT

ಪ್ರತಿಭಾ ಕಾರಂಜಿ ದಶಮಾನೋತ್ಸವ

​ಪ್ರಜಾವಾಣಿ ವಾರ್ತೆ
Published 7 ಜನವರಿ 2012, 19:30 IST
Last Updated 7 ಜನವರಿ 2012, 19:30 IST

ಚಿತ್ರದುರ್ಗ: ಐತಿಹಾಸಿಕ ನಗರಿಯಲ್ಲಿ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯ ದಶಮಾನೋತ್ಸವಕ್ಕೆ ಶುಕ್ರವಾರ ಅದ್ದೂರಿ ಚಾಲನೆ ದೊರೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾ ಹಿಸುವ ಉದ್ದೇಶದಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

31 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ 3,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಶಾಲಾ ಹಂತ, ಕ್ಲಸ್ಟರ್, ಬ್ಲಾಕ್ ಮತ್ತು ಜಿಲ್ಲಾ ಹಂತಗಳ ನಂತರ ರಾಜ್ಯಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯನ್ನು ಆಯೋಜಿಸಲಾಗಿದೆ.

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವಿಶೇಷವಾಗಿ ಅಲಂಕೃತಗೊಳಿಸಿದ್ದ ವೇದಿಕೆಯಲ್ಲಿ ಪ್ರತಿಭಾ ಕಾರಂಜಿಗೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ಮೊದಲು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯನ್ನು ತುಮಕೂರಿನಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಿ ಚಿತ್ರದುರ್ಗಕ್ಕೆ ಸ್ಥಳಾಂತರಿಸಲಾಯಿತು. ಇಲ್ಲಿನ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಅತಿ ಕಡಿಮೆ ಅವಧಿಯಲ್ಲಿ ಎಲ್ಲ ಸಿದ್ಧತೆಗಳನ್ನು ಉತ್ತಮವಾಗಿ ಕೈಗೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿರಸಿಯಲ್ಲಿ ನಡೆದ ಪ್ರತಿಭಾ ಕಾರಂಜಿಗಿಂತ ಇಲ್ಲಿ ಅತ್ಯುತ್ತಮವಾಗಿ ನಡೆಯಲಿದ್ದು, ಎಲ್ಲರಿಗೂ ಮಾದರಿಯಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಮಕ್ಕಳ ಪ್ರತಿಭೆ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ. ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತೀರ್ಪುಗಳನ್ನು ಗೌರವಿಸಿ ಯಶಸ್ಸು ಸಾಧಿಸಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ ವಸಂತ ಅಸ್ನೋಟಿಕರ್ ಸ್ಮರಣ ಸಂಚಿಕೆ `ಚಿತ್ರಕಲ್ಲು ಕಾರಂಜಿ~ ಬಿಡುಗಡೆ ಮಾಡಿದರು. ಜ. 8ರಂದು ಪ್ರತಿಭಾ ಕಾರಂಜಿಯ ಸ್ಪರ್ಧೆಗಳು ನಡೆಯಲಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.