ADVERTISEMENT

ಪ್ರವಾಸೋದ್ಯಮ ಅಭಿವೃದ್ಧಿಗೆ 25ಕೋಟಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 19:30 IST
Last Updated 19 ಅಕ್ಟೋಬರ್ 2011, 19:30 IST

ದೇವನಹಳ್ಳಿ: ಮೂರು ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಣ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಎತ್ತಿನ ಹೊಳೆಯಿಂದ ಪೈಪ್‌ಲೈನ್ ಮೂಲಕ ನೀರು ಹರಿಸುವ ಕಾರ್ಯಕ್ಕೆ ಶೀಘ್ರ ಚಾಲನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗುವುದು ಎಂದು ಕೇಂದ್ರ ಸಚಿವ ವೀರಪ್ಪ ಮೊಯಿಲಿ ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯ್ಕೆಗೊಂಡ ನೂತನ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

 ಬೆಂಗಳೂರು ಗ್ರಾಮಾಂತರ, ಚಿಕ್ಕಬಾಳ್ಳಪುರ, ಕೋಲಾರ ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ. ಯೋಜನೆಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರ 500 ಕೋಟಿ ರೂ. ಮಂಜೂರು ಮಾಡಿದೆ. ಈಗಾಗಲೇ ಎತ್ತಿನ ಹೊಳೆಯಿಂದ ಪೈಪ್‌ಲೈನ್ ಮೂಲಕ ಬಯಲು ಪ್ರದೇಶದಲ್ಲಿನ ಕೆರೆಗಳಿಗೆ ನೀರು ಹರಿಸಲು ಕನಿಷ್ಠ 6 ಟಿ.ಎಂ.ಸಿ ನೀರಿನ ಅಗತ್ಯವಿದೆ ಎಂದು ವಿವರಿಸಿದರು.

`ಪಟ್ಟಣದ ಐತಿಹಾಸಿಕ ಕೋಟೆ ಹಾಗೂ ನಂದಿ ಗಿರಿಧಾಮಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಹಾಗೂ ಅಭಿವೃದ್ಧಿಪಡಿಸಲು ವಿಶೇಷ `ಮೆಗಾ ಸರ್ಕಲ್ ಪ್ರವಾಸೋದ್ಯಮಕ್ಕಾಗಿ~ ಕೇಂದ್ರ ಸರ್ಕಾರ ದವತಿಯಿಂದ 25ಕೋಟಿ ರೂ ಬಿಡುಗಡೆ ಮಾಡಲಾಗಿದೆ~ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

`ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರ ಆಶಯದಂತೆ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಚುನಾವಣೆ ಮೂಲಕ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಪದಾಧಿಕಾರಿಗಳು ತಮ್ಮ ಆಯ್ಕೆ ಸಮರ್ಥಿಸುವ ರೀತಿಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು~ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಬಚ್ಚೇಗೌಡ, ಜಿಲ್ಲಾ ಕಾಂಗ್ರೆಸ್ ಎಸ್.ಸಿ.ಘಟಕ ಅಧ್ಯಕ್ಷ ಎ.ಚಿನ್ನಪ್ಪ, ಎಸ್.ಟಿ.ಘಟಕ ಅಧ್ಯಕ್ಷ ವಿ.ಎಸ್.ವೆಂಕಟೇಶ್, ಜಿ.ಪಂ ಸದಸ್ಯ ಬಿ.ರಾಜಣ್ಣ, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಪೂರ್ಣಚಂದ್ರ, ಟೌನ್ ವಿ.ಎಸ್.ಎಸ್.ಎನ್ ಬ್ಯಾಂಕ್ ಅದ್ಯಕ್ಷ ಎನ್.ರಘು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಂದ್ರ ಶೇಖರ್, ಕನ್ನಮಂಗಲ ಮಂಜುನಾಥ್, ಟೌನ್ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ.ಚಂದ್ರಪ್ಪ, ಖಾದಿ ಬೋರ್ಡ್ ಅಧ್ಯಕ್ಷ ಕೆ.ಪಟಾಲಪ್ಪ ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜಿ.ಎನ್ ವೇಣುಗೋಪಾಲ್, ಕಸಬಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ನಾಗೇಗೌಡ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.