ADVERTISEMENT

ಬರ: ಯುದ್ಧೋಪಾದಿ ಸಿದ್ಧತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2012, 19:30 IST
Last Updated 23 ಏಪ್ರಿಲ್ 2012, 19:30 IST

ಹಾಸನ: `ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಯುದ್ಧೋಪಾದಿಯಲ್ಲಿ ಸಿದ್ಧತೆ ಮಾಡಿಕೊಳ್ಳಿ. ಅದನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು~ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ ನಾಯಕ್ ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಒಂದೆರಡು ದಿನದಲ್ಲೇ ವರದಿ ತಯಾರಿಸಿ ಕೊಡುವಂತೆ ಅವರು ಜಲಾಶಯದ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

2011ರಲ್ಲಿ ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟೆಷ್ಟು ಪ್ರಮಾಣದಲ್ಲಿ ಮಳೆಯಾಗಿದೆ. ಯಾವ ತಾಲ್ಲೂಕಿನಲ್ಲಿ ಸರಾಸರಿ ಮಳೆಗಿಂತ ಕಡಿಮೆ ಮಳೆಯಾಗಿದೆ. ಯಾವ ತಾಲ್ಲೂಕು/ಹೋಬಳಿಯಲ್ಲಿ ಅಂತರ್ಜಲ ಮಟ್ಟ ಸರಾಸರಿ ಮಟ್ಟಕ್ಕಿಂತ ಜಾಸ್ತಿ ಕುಸಿತ ಕಂಡಿದೆ ಎಂಬ ವಿಚಾರಗಳ ಬಗೆಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕುಡಿಯುವ ನೀರಿನ ಸಮಸ್ಯೆ ತೀವ್ರವಾದರೆ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸಲು ಸಾಧ್ಯವೇ ಎಂಬ ಬಗ್ಗೆ ಚಿಂತನೆ ನಡೆಸಿ ಈ ಬಗ್ಗೆ ವಿಸ್ತೃತ ವರದಿ ತಯಾರಿಸಿ ಕಳುಹಿಸುವಂತೆ ಸೂಚಿಸಿದರು.

ಸಮಸ್ಯೆ ಇರುವ ಕಡೆಗಳಲ್ಲಿ ನೀರು, ಮೇವು ಒದಗಿಸಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು. ಪ್ರತಿ ಇಲಾಖೆಯವರೂ ತಾವು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಟಿ. ಅಂಜನಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.