ADVERTISEMENT

ಬಾಬುರಾವ ಕಾರಬಾರಿ ಬೀದರ್ ಜಿ.ಪಂ. ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2012, 19:30 IST
Last Updated 5 ಮಾರ್ಚ್ 2012, 19:30 IST

ಬೀದರ್: ನಿರೀಕ್ಷೆಯಂತೆ ಬೀದರ್ ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಾಬುರಾವ ಕಾರಬಾರಿ ಹಾಗೂ ಉಪಾಧ್ಯಕ್ಷರಾಗಿ ಸಂತೋಷಮ್ಮ ಪುಂಡಲೀಕರಾವ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭಾತಂಬ್ರಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಬಾಬುರಾವ ಕಾರಬಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೇಶ್ವರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆ ಸಂತೋಷಮ್ಮ ಪುಂಡಲೀಕರಾವ್ ಮಾತ್ರ ನಾಮಪತ್ರ ಸಲ್ಲಿಸಿದರು. ಹೀಗಾಗಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು.

ಗುಲ್ಬರ್ಗ ಪ್ರಾದೇಶಿಕ ಆಯುಕ್ತರಾದ ಕೆ. ರತ್ನಪ್ರಭ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯನ್ನು ಪ್ರಕಟಿಸಿದರು.

ಜಿ.ಪಂ. ಮೊದಲ 20 ತಿಂಗಳ ಅವಧಿಯ ಪೈಕಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಕೋರ್ ಕಮೀಟಿ ಸಭೆಯಲ್ಲಿ ತಲಾ 10 ತಿಂಗಳ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರಂತೆ ಇದೀಗ ಬಾಬುರಾವ ಕಾರಬಾರಿ ಮತ್ತು ಸಂತೋಷಮ್ಮ  ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೊದಲ ಅವಧಿಯಲ್ಲಿ ಈಗಾಗಲೇ 13 ತಿಂಗಳು ಪೂರ್ಣವಾಗಿದೆ. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಏಳು ತಿಂಗಳ ಅಧಿಕಾರ ಮಾತ್ರ ಸಿಗಲಿದೆ.

ನೂತನ ಅಧ್ಯಕ್ಷ -ಉಪಾಧ್ಯಕ್ಷರು ನೆರೆದಿದ್ದ ಅಭಿಮಾನಿಗಳತ್ತ ವಿಜಯದ ಸಂಕೇತ ತೋರಿದರು. ಜಿಲ್ಲಾ ಉಸ್ತುವಾರಿ ಸಚಿವ ರೇವುನಾಯಕ್ ಬೆಳಮಗಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಾಥರಾವ ಮಲ್ಕಾಪುರೆ, ಜಿಲ್ಲಾ ಅಧ್ಯಕ್ಷ ಸುಭಾಷ ಕಲ್ಲೂರು, ಪ್ರಧಾನ ಕಾರ್ಯದರ್ಶಿ ಬಾಬುವಾಲಿ ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯೇಕ ಬಜೆಟ್‌ಗೆ ಒತ್ತಾಯ
ಗುಲ್ಬರ್ಗ: ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ಆಗ್ರಹಿಸಿದರು.
 
ಇಲ್ಲಿನ ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸೋಮವಾರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಜನಪ್ರತಿನಿಧಿಗಳ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ದುಂಡು ಮೇಜಿನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.