ADVERTISEMENT

ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2012, 19:30 IST
Last Updated 21 ಜನವರಿ 2012, 19:30 IST

ಬಳ್ಳಾರಿ: ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಯನ್ನು ಹೊಡೆದೋಡಿಸುವಲ್ಲಿ ಪ್ರತಿಯೊಬ್ಬರೂ ಸಹಕರಿಬೇಕು ಎಂದು ಸಂಸದೆ ಜೆ. ಶಾಂತಾ ಸಲಹೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಏರ್ಪಡಿಸಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ ಲಾಂಛನ ಸ್ವೀಕಾರ ಹಾಗೂ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯವಿವಾಹ ತಡೆಗಟ್ಟುವಲ್ಲಿ ಪಾಲಕರು, ಸಂಘ- ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಈ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ. ಪ್ರತಿಯೊಬ್ಬರೂ ವಿದ್ಯಾವಂತರಾದಲ್ಲಿ ಇಂತಹ ಪದ್ಧತಿ ಮರೆಯಾಗುತ್ತದೆ. ಪಾಲಕರು ತಮ್ಮ ಮಕ್ಕಳು ವಯಸ್ಕರಾಗುವವರೆಗೆ ಮದುವೆ ಮಾಡದೆ, ಸೂಕ್ತ ಶಿಕ್ಷಣ ಕೊಡಿಸಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ನೆರವಾಗಬೇಕು ಎಂದರು.

ಬಾಲ್ಯವಿವಾಹ ಪದ್ಧತಿ ನಿರ್ಮೂಲನೆಗೆ ಈವರೆಗೆ ಅನೇಕ ಹೋರಾಟಗಳು ನಡೆದಿವೆ. ಪೋಲಿಯೊ ಮುಕ್ತ ರಾಷ್ಟ್ರ ನಿರ್ಮಾಣ ಮಾಡಿದಂತೆಯೇ ಬಾಲ್ಯವಿವಾಹ ಮುಕ್ತ ದೇಶ ನಿರ್ಮಾಣವಾಗಬೇಕು ಎಂದು ಶಾಸಕ ಜಿ. ಸೋಮಶೇಖರರೆಡ್ಡಿ ತಿಳಿಸಿದರು.

ಬಾಲ್ಯವಿವಾಹ ಪದ್ಧತಿಯು ಸಾಮಾಜಿಕ ಕಂಟಕವಾಗಿದ್ದು, ಇದನ್ನು ತಡೆಗಟ್ಟುವ ಕಾಯ್ದೆಯ ಸಮರ್ಪಕ ಅನುಷ್ಠಾನದ ಅಗತ್ಯವಿದೆ ಎಂದು ಮೇಯರ್ ಪಾರ್ವತಿ ಇಂದುಶೇಖರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅರುಣಾ ತಿಪ್ಪಾರೆಡ್ಡಿ ಪ್ರತಿಜ್ಞಾವಿಧಿ ಬೋಧಿಸಿದರು. ಉಪಮೇಯರ್ ಶಶಿಕಲಾ, ಉಪವಿಭಾಗಾಧಿಕಾರಿ ಶಶಿಕಾಂತ್ ಸೆಂಥಿಲ್, ತಹಶೀಲ್ದಾರ್ ಶಶಿಧರ ಬಗಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ  ಮೇಟಿ ಉಪಸ್ಥಿತರಿದ್ದರು. ಬಸವರಾಜ್ ಸ್ವಾಗತಿಸಿದರು.
 
ಇದೇ ವೇಳೆ ನಡೆದ ಬಾಲ್ಯವಿವಾಹ ತಡೆ ಕುರಿತ ಜಾಗೃತಿ ಜಾಥಾದಲ್ಲಿ ವಿವಿಧ ಶಾಲೆ- ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.