ನರಸಿಂಹರಾಜಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರ ಗೆಲುವು ನಿಶ್ಚಿತ ಎಂದು ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭವಿಷ್ಯ ನುಡಿದರು.
ಪಟ್ಟಣದ ಅಗ್ರಹಾರ ವ್ಯಾಪ್ತಿಯಲ್ಲಿ ಗುರುವಾರ ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತ ಯಾಚಿಸಿದ ಅವರು, ರಾಜ್ಯ ಸರ್ಕಾರದ ಸಾಧನೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳ ಮೇಲೆ ಮತ ಯಾಚಿಸಲಾಗುತ್ತಿದೆ.
ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಹಿಂದೆ ಈ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ ಎಂದರು.ಎಲ್ಲಾ ಕಾರ್ಯಕರ್ತರೂ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿನ ಸ್ಥಳೀಯ ಸಮಸ್ಯೆಗಳಿಗೆ ಹಿಂದೆ ಆಡಳಿತ ನಡೆಸಿದ ಸರ್ಕಾರಗಳು ಕಾರಣ ಎಂದರು.
ಕಳೆದ 4 ವರ್ಷಗಳಲ್ಲಿ ಬಿಜೆಪಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಸ್ಥಳೀಯ ಶಾಸಕರು ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿನ್ನು ಕೈಗೊಂಡಿದ್ದಾರೆ ಎಂದರು.ಎಲ್ಲಾ ಸಚಿವರು, ಶಾಸಕರು ಒಟ್ಟಾಗಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಆರ್.ರಾಜಶೇಖರ್, ಬಿ.ಎಸ್.ಆಶೀಶ್ ಕುಮಾರ್, ಜಯರಾಮ, ಗುರುಮೂರ್ತಿ, ಹಿರಣ್ಣಯ್ಯ, ನಾಗರಾಜ್, ಗೋಪಾಲ ಕೃಷ್ಣ, ಶಿವಕುಮಾರ್, ಸತೀಶ್, ಲಕ್ಷ್ಮಿನಾರಾಯಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.