ADVERTISEMENT

ಬೆಳಗಾವಿ ಅಧಿವೇಶನ ಇಲ್ಲ: ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2012, 19:10 IST
Last Updated 16 ಜೂನ್ 2012, 19:10 IST

ಹಾವೇರಿ:  ರಾಷ್ಟ್ರಪತಿ ಚುನಾವಣೆ ಜುಲೈ 19ರಂದು ನಡೆಯುವುದರಿಂದ ಈ ಬಾರಿಯ ವಿಧಾನಮಂಡಲ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.

ಶಿಗ್ಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೂ ಮೊದಲೇ ವಿಧಾನಸಭಾ ಅಧಿವೇಶನ ಆರಂಭಿಸಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಇದೆ ಎಂದರು. ಬೆಳಗಾವಿಯಲ್ಲಿ ನಿರ್ಮಾಣವಾಗುತ್ತಿರುವ ಸುವರ್ಣ ವಿಧಾನಸೌಧ ಕಟ್ಟಡದ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಮುಂದಿನ ತಿಂಗಳು ಉದ್ಘಾಟನೆಯಾಗಲಿದೆ ಎಂದರು.

700 ಗ್ರಾಮಗಳಿಗೆ ಟ್ಯಾಂಕರ್ ನೀರು: `ರಾಜ್ಯದಲ್ಲಿ ಮುಂಗಾರು ಪ್ರವೇಶ ವಿಳಂಬವಾದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಉಲ್ಬಣವಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಸಮಸ್ಯೆ ಇರುವ 700 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ~ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. 

  ಮಳೆ ಬಾರದ ಕಾರಣ ರಾಜ್ಯದ ಬಹುತೇಕ ಜಲಾಶಯಗಳು ಒಣಗಲಾರಂಭಿಸಿವೆ. ಹಿಡಕಲ್ ಅಣೆಕಟ್ಟು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ಬೆಳಗಾವಿ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುವ ಸಾಧ್ಯತೆಯಿದೆ.  ಕೆಲವೆಡೆ ಮಳೆಯಾಗಿದ್ದರಿಂದ ಅಲ್ಲಲ್ಲಿ ತೆರೆಯಲಾದ ಗೋಶಾಲೆಗಳನ್ನು ಮುಚ್ಚಲಾಗಿತ್ತು. ಈಗ ಮತ್ತೆ ಮಳೆ ಕೈಕೊಟ್ಟಿದ್ದರಿಂದ ರೈತರು ತಮ್ಮ ದನಕರುಗಳನ್ನು ಗೋಶಾಲೆಯತ್ತ ತರುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರೆದರೆ, ಇನ್ನಷ್ಟು ಗೋಶಾಲೆಗಳನ್ನು ತೆರೆಯಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.