ADVERTISEMENT

ಬೆಳೆ ವಿಮೆ ನೋಂದಣಿ ಅವಧಿ: ವಿಸ್ತರಣೆಗೆ ಕೇಂದ್ರಕ್ಕೆ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 19:30 IST
Last Updated 7 ಜುಲೈ 2012, 19:30 IST

ಚಾಮರಾಜನಗರ: `ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯ ಕಂಡಿರುವ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ರಾಷ್ಟ್ರೀಯ ಕೃಷಿ ವಿಮಾ ಯೋಜನೆಯ ನೋಂದಣಿ ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ~ ಎಂದು ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭರತ್‌ಲಾಲ್ ಮೀನಾ ತಿಳಿಸಿದರು.

ನಗರದಲ್ಲಿ ಶನಿವಾರ ಕೃಷಿ ಕ್ಷೇತ್ರ-ಹೊಸ ಆಲೋಚನೆ ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, `ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಬಿದ್ದಿಲ್ಲ. ಹೀಗಾಗಿ, ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ.

ಮುಂಬರುವ ತಿಂಗಳುಗಳಲ್ಲಿ ಮಳೆ ಬೀಳುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ರೈತರು ಬೆಳೆಯುವ ಫಸಲಿಗೆ ಅನುಗುಣವಾಗಿ ಬೆಳೆ ವಿಮೆ ನೋಂದಣಿಯ ಅವಧಿ ವಿಸ್ತರಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ~ ಎಂದು ವಿವರಿಸಿದರು.

`ಬೆಳೆ ನಷ್ಟದ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದೆ. ಜುಲೈ ಎರಡನೇ ವಾರದಲ್ಲಿ ಮಳೆ ಬೀಳುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಮುಂಬರುವ ತಿಂಗಳುಗಳಲ್ಲಿ ಅಲ್ಪಾವಧಿ ಬೆಳೆ ಬೆಳೆಯುವ ಕುರಿತು ರೈತರಿಗೆ ಅಗತ್ಯ ಬಿತ್ತನೆಬೀಜ, ರಸಗೊಬ್ಬರ ಪೂರೈಸಲು ಕೃಷಿ ಇಲಾಖೆಯ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಸೂಚಿಸಲಾಗಿದೆ~ ಎಂದರು.

`ಮೈಸೂರು, ಕೊಡಗು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜ್ಯೋತಿ ಬತ್ತ ಬೆಳೆಯಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಈ ಬತ್ತದ ಬಳಕೆ ಪ್ರಮಾಣ ಕಡಿಮೆ. ಇಲ್ಲಿ ಉತ್ಪಾದನೆಯಾಗುವ ಬತ್ತಕ್ಕೆ ಕೇರಳದಲ್ಲಿ ಬೇಡಿಕೆ ಹೆಚ್ಚಿದ್ದು, ಆ ರಾಜ್ಯದಲ್ಲಿ ಬೆಂಬಲ ಬೆಲೆ ನೀಡಲಾಗುತ್ತಿದೆ. ಅದೇ ಮಾನದಂಡದ ಅನ್ವಯ ರಾಜ್ಯದಲ್ಲಿ ಬೆಳೆಯುವ ಜ್ಯೋತಿ ಬತ್ತಕ್ಕೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರ ಸರ್ಕಾರ ಮನವಿ ಮಾಡಲಾಗಿದೆ~ಎಂದು ಮೀನಾ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.