ADVERTISEMENT

ಭ್ರಷ್ಟಾಚಾರ: ಸಿಪಿಎಂ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2011, 19:30 IST
Last Updated 24 ಜನವರಿ 2011, 19:30 IST

ಬಳ್ಳಾರಿ: ’ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅಧಿಕಾರ ದುರುಪಯೋಗ ಆರೋಪ ಎದುರಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ ಸಿಪಿಎಂ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಸ್ಥಳೀಯ ರಾಯಲ್‌ವೃತ್ತದ ಬಳಿ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಭ್ರಷ್ಟ ಬಿಜೆಪಿ ಸರ್ಕಾರದ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿದರು.

’ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ನ್ಯಾಯಸಮ್ಮತವಾಗಿದೆ. ಅದನ್ನು ವಿರೋಧಿಸಿ ಬಿಜೆಪಿಯು ಬಂದ್‌ಗೆ ಕರೆ ನೀಡಿದ್ದು, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬುಡಮೇಲು ಮಾಡಿದಂತಾಗಿದೆ’ ಎಂದು ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಎಸ್. ಪ್ರಸನ್ನಕುಮಾರ ಆರೋಪಿಸಿದರು.

’ರೈತರ, ಕೂಲಿಕಾರ್ಮಿಕರ, ದುಡಿಯುವ ವರ್ಗದ ಮತ್ತು ದಲಿತರ ಸಮಸ್ಯೆಗಳನ್ನು ಕಡೆಗಣಿಸುತ್ತಿರುವ ಈ ಭ್ರಷ್ಟ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಹೊಂದಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾದಿಯಾಗಿ ಎಲ್ಲ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು. ಪಕ್ಷದ ಜಿಲ್ಲಾ ಮುಖಂಡರಾದ ಯು.ಬಸವರಾಜ, ಬಿ.ಅಡಿವೆಪ್ಪ, ಎಚ್.ತಿಪ್ಪಯ್ಯ, ರಂಗಪ್ಪ ದಾಸರ, ಕೆ. ಗಾದಿಲಿಂಗಪ್ಪ, ದುರ್ಗಪ್ಪ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.