ADVERTISEMENT

ಯುಪಿಸಿಎಲ್ ಬಂದ್ ಮಾಡುವ ಪ್ರಶ್ನೆ ಇಲ್ಲ: ಸಚಿವ ಆಚಾರ್ಯ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2011, 19:30 IST
Last Updated 19 ಮಾರ್ಚ್ 2011, 19:30 IST

ಉಡುಪಿ: ’ರಾಜ್ಯದಲ್ಲಿನ ವಿದ್ಯುತ್ ಕೊರತೆಯಿಂದಾಗಿ ನಮಗೆ ಉಷ್ಣ ವಿದ್ಯುತ್ ಸ್ಥಾವರ ಬಹಳ ಅಗತ್ಯ. ಹೀಗಾಗಿ ಪರಿಸರಕ್ಕೆ ಹಾನಿಯಾಗದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆಯೇ ಹೊರತು ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರವನ್ನು ಬಂದ್ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ವಿ.ಎಸ್.ಆಚಾರ್ಯ ಇಲ್ಲಿ ಪ್ರತಿಕ್ರಿಯಿಸಿದರು.

ಮಣಿಪಾಲದ ಎಂಡ್‌ಪಾಯಿಂಟ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾಮಗಾರಿಯನ್ನು ಶನಿವಾರ ವೀಕ್ಷಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.‘ಕಲ್ಲಿದ್ದಲ್ಲನ್ನು ಬಳಸಿಕೊಂಡು ವಿದ್ಯುತ್ ಉತ್ಪಾದನೆ ಮಾಡುವುದು ಬಹಳ ಸುರಕ್ಷಿತ ವಿಧಾನ. ನಮ್ಮಂತಹ  ರಾಷ್ಟ್ರಗಳಿಗೆ ಬಹಳ ಸೂಕ್ತವಾದದ್ದು ಕೂಡ. ಅದನ್ನು ಯಾರೂ ಕೂಡ ಪ್ರಶ್ನೆ ಮಾಡುವಂತಿಲ್ಲ. ಅಷ್ಟಕ್ಕೂ ನಮಗೆ ವಿದ್ಯುತ್ ಕೊರತೆಯಿದೆ. ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ನಮಗೆ ಇಂತಹ ಘಟಕಗಳ ಅವಶ್ಯಕತೆಯಿದೆ. ಹೀಗಾಗಿ ಘಟಕವನ್ನು ಬಂದ್ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪರಿಸರಕ್ಕೆ ಹಾನಿಯಾಗುತ್ತಿದೆ ಎಂಬ ಕೂಗಿ ಕೇಳಿ ಬಂದಿದೆ. ನಿಜ. ಅದನ್ನು ಸರಿಪಡಿಸುವುದಕ್ಕಾಗಿಯೇ ಯುಪಿಸಿಎಲ್ ಅಧಿಕಾರಿಗಳನ್ನು ಕರೆಯಿಸಿ ಮಾತುಕತೆ ನಡೆಸಲಾಗಿದೆ. ಅದನ್ನು ಕೂಡಲೇ ಸರಿಪಡಿಸಲು ಸೂಚನೆ ನೀಡಿ ಒಂದು ತಿಂಗಳ ಗಡುವನ್ನೂ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.