ADVERTISEMENT

ಯೋಜನೆಗಳ ಲಾಭ ಪಡೆಯಲು ಮುಂದಾಗಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ಬೀದರ್: ಸರ್ಕಾರಿ ಯೋಜನೆಗಳ ಲಾಭ ಪಡೆಯುವುದಕ್ಕಾಗಿ ಜನ ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್  ಮಣಿಪ್ಪಾಡಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು.

ಜನ ಉದಾಸೀನ ವಹಿಸಿದರೆ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಆಗುವುದಿಲ್ಲ. ಅಧಿಕಾರಿಗಳು ನಿಷ್ಕ್ರಿಯರಾಗುತ್ತಾರೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ತಿಳಿಸಿದರು.

ಅಧಿಕಾರಿಗಳು ಪಡೆಯುತ್ತಿರುವ ಸಂಬಳ ಜನರ ತೆರಿಗೆಯಿಂದ ಬಂದದ್ದು. ಆದ್ದರಿಂದ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೀದರ್ ಜಿಲ್ಲೆಯ ಪರಿಸ್ಥಿತಿಯೇ ಬೇರೆ ಇದೆ. ಇಲ್ಲಿ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಯೋಜನೆಗಳ ಬಗ್ಗೆ ಮಾಹಿತಿ ಇಲ್ಲ. ಜನರ ಸಮಸ್ಯೆಗೆ ಎಳ್ಳಷ್ಟು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಧಿಕಾರಿಗಳು ಜನರ ಬಗ್ಗೆ ಕನಿಕರ, ಕಾಳಜಿ ಹೊಂದಬೇಕು ಎಂದು ಹೇಳಿದರು.

ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಇರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅರ್ಹ ಫಲಾನುಭವಿಗಳಿಗೆ ಅವುಗಳ ಲಾಭ ತಲುಪಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಕಾಜಿ ಅರ್ಷದ್ ಅಲಿ, ಶಾಸಕ ರಹೀಮ್‌ಖಾನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಾಣಿಕಪ್ಪ ಮಂಗಲಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಸತೀಶ ಕುಮಾರ ಉಪಸ್ಥಿತರಿದ್ದರು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.