ADVERTISEMENT

ರಾಮ್‌ದೇವ್ ಬಂಧನ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2011, 19:30 IST
Last Updated 5 ಜೂನ್ 2011, 19:30 IST

ರಾಮನಗರ: ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ಬಾಬಾ ರಾಮ್‌ದೇವ್ ಕೈಗೊಂಡಿರುವ ಉಪವಾಸ ಸತ್ಯಾಗ್ರಹವನ್ನು ಕೇಂದ್ರ ಸರ್ಕಾರವು ಪೊಲೀಸ್ ಬಲ ಬಳಸಿ ಹತ್ತಿಕ್ಕಲು ಯತ್ನಿಸಿರುವ ಕ್ರಮ ಖಂಡನೀಯ ಎಂದು ಆರ್.ಎಸ್.ಎಸ್ ಜಿಲ್ಲಾ ಸಂಚಾಲಕ ರವೀಂದ್ರನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಬಾಬಾ ರಾಮ್‌ದೇವ್ ಬಂಧನ ವಿರೋಧಿಸಿ ನಡೆಸಿ ಇಲ್ಲಿನ ಐಜೂರು ವೃತ್ತದಲ್ಲಿ ಭಾನುವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ರಾಜಕಾರಣಿಗಳು, ಬಂಡವಾಳಶಾಹಿಗಳು ಭ್ರಷ್ಟಾಚಾರದಿಂದ ಗಳಿಸಿದ ರೂ. 400 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿದ್ದಾರೆ.

ದೇಶದಲ್ಲಿ ಕಬಳಿಸಿದ ಈ ಹಣವನ್ನು ವಿದೇಶಿ ಬ್ಯಾಂಕುಗಳಲ್ಲಿಟ್ಟು ದೇಶವನ್ನು ಬಡತನದ ಕೂಪಕ್ಕೆ ತಳ್ಳುತ್ತಿದ್ದಾರೆ. ಇಂತಹ ಭ್ರಷ್ಟರನ್ನು ಕೇಂದ್ರ ಸರ್ಕಾರ ರಕ್ಷಿಸಲು ಹವಣಿಸುತ್ತಿದೆ ಎಂದು ಟೀಕಿಸಿದರು.
 ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲ್ ಮಾತನಾಡಿ, ದೆಹಲಿಯ ರಾಮಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾಧು, ಸಂತರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ಲಾಠಿ ಪ್ರಹಾರ ಮಾಡಿರುವುದು ಖಂಡನೀಯ. ಕೇಂದ್ರ ಸರ್ಕಾರ ಸಂತ ಬಾಬಾ ರಾಮ್‌ದೇವ್ ಹಾಗೂ ಚಳವಳಿಗಾರರನ್ನು ತಡೆದು ಪ್ರಜಾಸತ್ತಾತ್ಮಕ ಪ್ರತಿಭಟನೆಯನ್ನು ದಮನ ಮಾಡಿರುವುದು ಸರಿಯಲ್ಲ ಎಂದರು.

 ಬಾಬಾ ರಾಮ್‌ದೇವ್ ಅವರನ್ನು ಬಿಡುಗಡೆಗೊಳಿಸಿ, ಸ್ವಿಸ್ ಬ್ಯಾಂಕಿನಲ್ಲಿರುವ ಅಕ್ರಮ ಹಣವನ್ನು ವಾಪಸು ತರಲು ಒತ್ತಾಯಿಸಿ ಇಂದು ಸಾಂಕೇತಿಕವಾಗಿ ಅರ್ಧ ಗಂಟೆ ರಸ್ತೆ ತಡೆ ನಡೆಸಿದ್ದೇವೆ. ನಮ್ಮ ನ್ಯಾಯಯುತ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ದೇಶಾದ್ಯಂತ ಹೋರಾಟ ತೀವ್ರಗೊಳಿಸಲಾಗುತ್ತದೆ ಎಂದರು. ಅಚ್ಚಲು ಉಮೇಶ್, ಚಂದನ್ ಮೋರೆ, ಜಗದೀಶ್, ಸತೀಶ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.