ADVERTISEMENT

ರೂ 300 ಕೋಟಿ ಅಕ್ರಮ: ಉದಾಸಿ ಮೌನಕ್ಕೆ ಕುಮಾರಸ್ವಾಮಿ ಟೀಕೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2012, 19:30 IST
Last Updated 1 ಜುಲೈ 2012, 19:30 IST

ಹಾವೇರಿ: `ರಾಮನಗರ ಜಿಲ್ಲೆಯ ಲೋಕೋಪಯೋಗಿ ಇಲಾಖೆಯಲ್ಲಿ ರೂ 300 ಕೋಟಿ ದುರುಪಯೋಗವಾಗಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗಿಶ್ವರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಿಳಿಸಿರುವುದು ಈ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ~ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿರುವ ಸಚಿವರೇ ಇನ್ನೊಂದು ಇಲಾಖೆಯಲ್ಲಿ ನಡೆದಿರುವ ಅವ್ಯವಹಾರ ತನಿಖೆ ನಡೆಸಲು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ ಎಂದರು.
ಲೋಕೋಪಯೋಗಿ ಇಲಾಖೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದ್ದರೂ ಇಲಾಖೆ ಜವಾಬ್ದಾರಿ ಹೊತ್ತ ಸಚಿವ ಸಿ.ಎಂ. ಉದಾಸಿ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಗುತ್ತಿಗೆದಾರರು ಒಂದು ಕೋಟಿ ರೂಪಾಯಿ ಕಾಮಗಾರಿಗೆ ರೂ 10 ಲಕ್ಷ  ಲಂಚ ನೀಡಿದರೆ ಟೆಂಡರ್ ಇಲ್ಲದೇ ಕಾಮಗಾರಿ ಕೈಗೊಳ್ಳುವುದು ಈ ಸರ್ಕಾರದಲ್ಲಿ ಸಾಮಾನ್ಯವಾಗಿ ನಡೆಯುತ್ತದೆ ಎಂದು ಆಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.