ADVERTISEMENT

ಲೇಬಗೇರಾ: ಚಿಗುರು ಕಾರ್ಯಕ್ರಮ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2011, 19:30 IST
Last Updated 24 ಜನವರಿ 2011, 19:30 IST

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ  ಆಶ್ರಯದಲ್ಲಿ ಸೋಮವಾರ ತಾಲ್ಲೂಕಿನ ಲೇಬಗೇರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಕ್ಷಕ ಎ.ಪಿ.ಅಂಗಡಿ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅವರ ಶೈಕ್ಷಣಿಕ ಆಸಕ್ತಿ ಅಭಿವೃದ್ಧಿಗೊಳ್ಳುವ ಜೊತೆಗೆ ಸರ್ವಾಂಗೀಣ ಪ್ರಗತಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು.

ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕವಾಗುತ್ತವೆ.ಅದರಲ್ಲೂ ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕೈಜೋಡಿಸಿ, ಕಾರ್ಯಕ್ರಮ ಆಯೋಜನೆ ಮಾಡಿದ್ದು ಅಭಿನಂದನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ನಾಗರಾಜ ದೇಸಾಯಿ ಮಾತನಾಡಿ, ಪ್ರತಿ ಮಗುವಿನಲ್ಲಿಯೂ ಪ್ರತಿಭೆ ಇರುತ್ತದೆ. ಆದರೆ, ಪ್ರತಿಭೆ ಅಭಿವ್ಯಕ್ತಿಗೊಳ್ಳಲು ಸೂಕ್ತ ಮಾಧ್ಯಮ ಹಾಗೂ ವೇದಿಕೆ ಅಗತ್ಯ ಎಂದರು. ಮುಖ್ಯ ಅತಿಥಿಗಳಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಾಳಪ್ಪ ನಂದ್ಯಾಪುರ, ಸರ್ಕಾರಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಯಂಕಣ್ಣ ಕುಷ್ಟಗಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹುಚ್ಚಮ್ಮ, ಶಿಕ್ಷಕರಾದ ಈರಣ್ಣ ಕುಂಬಾರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.