ಭದ್ರಾವತಿ: ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ಗ್ರಾಮಸ್ಥರು ಥಳಿಸಿದ ಘಟನೆ ಮಂಗಳವಾರ ನಡೆದಿದೆ. ತಾಲ್ಲೂಕಿನ ಅರಕೆರೆ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಕ ಗುರುಬಸಪ್ಪ ಶಾಲಾ ವಿದ್ಯಾರ್ಥಿನಿ ಜತೆ ಸೋಮವಾರ ನಡೆದ ಶಾಲಾ ಕಾರ್ಯಕ್ರಮ ಸಂದರ್ಭದಲ್ಲಿ ಅಸಭ್ಯ ವರ್ತನೆ ತೋರಿದ್ದಾನೆ ಎನ್ನಲಾಗಿದೆ.
ಈ ಸುದ್ದಿ ಮಂಗಳವಾರ ಗ್ರಾಮದಲ್ಲಿ ಹಬ್ಬಿದ್ದರಿಂದ ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಾಯಿಸಿ, ದೈಹಿಕ ಶಿಕ್ಷಕನ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲವರು ಥಳಿಸಿದ್ದಾರೆ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ, ಡಿಡಿಪಿಐ ಭೇಟಿ ನೀಡಿ ತಪಿತಸ್ಥ ಶಿಕ್ಷಕನ ವಿರುದ್ಧ ಕ್ರಮ ಜರುಗಿಸುವ ಭರವಸೆ ನೀಡಿದ ನಂತರ ಗ್ರಾಮದಲ್ಲಿ ಶಾಂತಿ ವಾತಾವರಣ ನೆಲೆಸಿದೆ.
ಶಿಕ್ಷಕ ಅಮಾನತು: (ಶಿವಮೊಗ್ಗ ವರದಿ): ಭದ್ರಾವತಿ ತಾಲ್ಲೂಕಿನ ಅರಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ದೈಹಿಕ ಶಿಕ್ಷಕನನ್ನು ಅಮಾನತುತೊಳಿಸಿ ಬೆಂಗಳೂರು ಪ್ರಾದೇಶಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಎಸ್.ಎಲ್. ಚವಾಣ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ದೈಹಿಕ ಶಿಕ್ಷಕ ಗುರುಬಸಪ್ಪ ಅಮಾನತುಗೊಂಡಿದ್ದಾರೆ. ಇವರು ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಲೈಂಗಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನೀಡಿದ ವರದಿ ಮೇರೆಗೆ ಗುರುಬಸಪ್ಪ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಚವಾಣ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಗುರುಬಸಪ್ಪ ಅವರು ಈ ಹಿಂದೆ ಅಂತರಗಂಗೆ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಲೂ ಅವರ ವಿರುದ್ಧ ಈ ರೀತಿಯ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲ, ಕೆಲ ದಿನಗಳ ಹಿಂದೆ ಅರಕೆರೆ ಶಾಲೆಯಲ್ಲಿಯೇ ಅಸಭ್ಯವಾಗಿ ವರ್ತಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.