ADVERTISEMENT

ವೈದ್ಯರ ಮೇಲೆ ಹಲ್ಲೆ: ಸಿಬ್ಬಂದಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 19:30 IST
Last Updated 10 ಅಕ್ಟೋಬರ್ 2011, 19:30 IST

ಅರಸಿಕೆರೆ: ಕರ್ತವ್ಯ ನಿರತ ವೈದ್ಯರ ಮೇಲೆ ನಡೆದ ಹಲ್ಲೆ ಹಾಗೂ ಗಂಡಸಿ ಪೊಲೀಸ್ ಠಾಣೆಯ ಪಿಎಸ್‌ಐ ಅಸಹಕಾರದ ವಿರುದ್ಧ ತಾಲ್ಲೂಕಿನ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸುಮಾರು 150ಕ್ಕೂ ಹೆಚ್ಚು ಸಿಬ್ಬಂದಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶಂಕರಪ್ಪ ಹಾಗೂ ಹಿರಿಯ ಆರೋಗ್ಯಾಧಿಕಾರಿ ಡಾ.ಶೈಲಜಾ ನೇತೃತ್ವದಲ್ಲಿ ಆಸ್ಪತ್ರೆಯ ಆವರಣದಲ್ಲಿ ಜಮಾಯಿಸಿದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಪೊಲೀಸರ ವಿರುದ್ಧ ಮೆರವಣಿಗೆ ನಡೆಸಿದರು.

ಶುಕ್ರವಾರ ತಾಲ್ಲೂಕಿನ ಬಾಗೇಶಪುರದ ಗೌರಮ್ಮ  ಅಪಘಾತದಲ್ಲಿ ಗಾಯಗೊಂಡು ಸ್ಥಳೀಯ ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಕೇಂದ್ರಕ್ಕೆ ಬಂದಿದ್ದರು. ಆಗ  ಕರ್ತವ್ಯದಲ್ಲಿದ್ದ ಡಾ.ನಿತಿನ್ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುರ್ತು ವಾಹನಕ್ಕೆ ಕರೆ ಮಾಡಿ, ವರದಿ ಬರೆಯುತ್ತಿದ್ದರು. ಈ ವೇಳೆ ಆಸ್ಪತ್ರೆಗೆ ನುಗ್ಗಿದ ಚಂದ್ರೇಗೌಡ ಮತ್ತು 20 ಮಂದಿ ವೈದ್ಯರ ಮೇಲೆ ಹಲ್ಲೆ ನಡೆಸಿತು.
 
ಘಟನೆ ಬಗ್ಗೆ ವೈದ್ಯಾಧಿಕಾರಿ ಗಂಡಸಿ ಪೊಲೀಸರಿಗೆ ದೂರು ನೀಡಿದರೂ  ಪಿಎಸ್‌ಐ ನರೇಂದ್ರಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದರು.  ತಮಗೆ ಸೂಕ್ತ ರಕ್ಷಣೆ ಒದಗಿಸಬೇಕು ಹಾಗೂ ಗಂಡಸಿ ಪಿಎಸ್‌ಐ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.