ADVERTISEMENT

ಶಾಶ್ವತ ನೀರಾವರಿ ಅನುಷ್ಠಾನ: ಸಿಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2011, 19:40 IST
Last Updated 20 ಫೆಬ್ರುವರಿ 2011, 19:40 IST

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಜನರು ಎದುರಿಸುತ್ತಿರುವ ನೀರಿನ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ನಗರದಲ್ಲಿ ನೂತನ ವೀರಾಂ ಜನೇಯಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಸ್ವಾಮೀಜಿ ಸಹ ಮನವಿ ಮಾಡಿದ್ದಾರೆ. ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ನನ್ನ ಕೈಲಾದ ಪ್ರಯತ್ನ ಮಾಡುತ್ತೇನೆ’ ಎಂದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಜಾತಕ ಬಯಲುಗೊಳಿಸುವುದಾಗಿ ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ‘ನನ್ನ ಜಾತಕ ಅವರ ಬಳಿಯಿದೆ. ಅವರ ಜಾತಕ ನನ್ನ ಬಳಿಯಿದೆ. ನಮ್ಮೆಲ್ಲರ ಜಾತಕ ವೀರಾಂಜನೇಯಸ್ವಾಮಿ ಬಳಿ ಇದೆ. ದೇವರು ಎಲ್ಲವನ್ನೂ ನೋಡಿ, ಎಲ್ಲರಿಗೂ ಸದ್ಬುದ್ಧಿ ನೀಡಲಿ. ಸತ್ಯ ಬಹಿರಂಗಪಡಿಸಲಿ’ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಹೇಮಾಮಾಲಿನಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ ‘ಈ ಹಿಂದಿನ ಸರ್ಕಾರಗಳ ಅವಧಿಯಲ್ಲೂ ಹೊರ ರಾಜ್ಯದವರು ನಮ್ಮ ರಾಜ್ಯದಿಂದ  ರಾಜ್ಯಸಭೆ ಪ್ರತಿನಿಧಿಸಿದ್ದಾರೆ. ಪಕ್ಷದ ವರಿಷ್ಠರ ನಿರ್ಣಯದಂತೆ ಹೇಮಾಮಾಲಿನಿ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.