ADVERTISEMENT

ಶೇ 7.5 ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ಹೊಳಲ್ಕೆರೆ: ನಾಯಕ ಜನಾಂಗಕ್ಕೆ ಶೇ. 7.5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಎಲ್.ಜಿ. ಹಾವನೂರು ಹೋರಾಟ ಸಮಿತಿಯ ಸದಸ್ಯರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಪರಿಶಿಷ್ಟ ವರ್ಗಕ್ಕೆ ಶಿಕ್ಷಣ, ಉದ್ಯೋಗ, ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಶೇ. 7.5ರಷ್ಟು ಮೀಸಲಾತಿ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳನ್ನು ಹೊರತುಪಡಿಸಿ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಿಗೆ ಕೇವಲ ಶೇ. 3ರಷ್ಟು ಮೀಸಲಾತಿ ನೀಡುತ್ತಿದೆ.

ಇದರಿಂದ ನಾಯಕ ಜನಾಂಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಶೀಘ್ರದಲ್ಲೇ ಈ ತಾರತಮ್ಯ ನಿವಾರಿಸಿ ಎಲ್ಲಾ ಕ್ಷೇತ್ರಗಳಿಗೂ ಕೇಂದ್ರ ಸರ್ಕಾರದ ಮಾದರಿಯಲ್ಲಿ ಶೇ. 7.5ರಷ್ಟು ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಉದ್ಯೋಗ ಪಡೆದಿರುವವರನ್ನು ಕೆಲಸದಿಂದ ವಜಾಗೊಳಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಹಾವನೂರು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಗೌರಿ ರಾಜಕುಮಾರ್, ಹನುಮಂತಪ್ಪ, ರಾಮಗಿರಿ ರಾಮಣ್ಣ, ನಾಯಕ ಸಮಾಜದ ಅಧ್ಯಕ್ಷ ಪುಟ್ಟಸ್ವಾಮಿ, ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಎಸ್.ಜೆ. ರಂಗಸ್ವಾಮಿ, ಬಸವರಾಜ್, ನಾಗರಾಜ್, ಕಾಟಲಿಂಗಪ್ಪ, ಶೇಖರಪ್ಪ, ಲೋಹಿತ್‌ಕುಮಾರ್, ಸಣ್ಣ ಪಾಲೇಗೌಡ, ತಿಪ್ಪೇಸ್ವಾಮಿ, ಮಂಜುನಾಥ್, ಕೆಂಚಪ್ಪ, ಸೂರೇಗೌಡ, ಮಲ್ಲಿಕಾರ್ಜುನ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.