ಶ್ರೀರಂಗಪಟ್ಟಣ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿಂದ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಗುರುವಾರ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.
ಸುಮಾರು ಅರ್ಧ ತಾಸು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್‌ಗುಪ್ತ ಅವರ ವಿರುದ್ಧ ಘೋಷಣೆ ಕೂಗಿದರು. ಸ್ವಚ್ಛತೆಗಾಗಿ ತಿಂಗಳಿಗೆ ರೂ.23 ಸಾವಿರ ಹಣ ಖರ್ಚು ಮಾಡಲಾಗುತ್ತಿದೆ. ಗುತ್ತಿಗೆದಾರರು ಸ್ವಚ್ಛತೆ ಕಾರ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ.
ಶೌಚಾಲಯಗಳು ಕಟ್ಟಿಕೊಂಡಿದ್ದು, ಗಬ್ಬು ನಾರುತ್ತಿವೆ. ಸೊಳ್ಳೆಗಳ ಹಾವಳಿ ಮಿತಿ ಮೀರಿದ್ದು, ಆಸ್ಪತ್ರೆಗೆ ದಾಖಲಾದ ರೋಗಿಗಳು ರಾತ್ರಿ ವೇಳೆ ನಿದ್ರೆ ಮಾಡಲಾಗದೆ ವನವಾಸ ಅನುಭವಿಸುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಗಂಜಾಂ ರವಿಚಂದ್ರ ದೂರಿದರು.
ಆಸ್ಪತ್ರೆಯ ಆವರಣದಲ್ಲಿ ಗಿಡಗಂಟಿಗಳು ಬೆಳೆದಿದ್ದು ಹಾವು, ಕ್ರಿಮಿಕೀಟಗಳು ಬರುತ್ತಿವೆ. ಅಲ್ಲಲ್ಲಿ ಕಸದ ರಾಶಿ ಬಿದ್ದಿದೆ. ಆಸ್ಪತ್ರೆ ಆವರಣದಲ್ಲಿ ಮೂಗು ಮುಚ್ಚಿ ತಿರುಗಾಡಬೇಕಾದ ಪರಿಸ್ಥಿತಿ ಬಂದಿದೆ. ಸ್ವಚ್ಛತೆಯ ಗುತ್ತಿಗೆ ಪಡೆದಿರುವ ವ್ಯಕ್ತಿ ಅಗತ್ಯ ಕೆಲಸಗಾರರನ್ನು ನೇಮಿಸಿಕೊಳ್ಳದಿರುವುದು ಸಮಸ್ಯೆಗೆ ಕಾರಣವಾಗಿದೆ.
ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರತೆ ಇರುವ ವೈದ್ಯಕೀಯ ಸಿಬ್ಬಂದಿಯನ್ನು ಶೀಘ್ರ ನೇಮಕ ಮಾಡಬೇಕು ಎಂದು ಮುಖಂಡ ಕುಬೇರಪ್ಪ ಒತ್ತಾಯಿಸಿದರು.
ಅಹವಾಲು ಆಲಿಸಿದ ಡಾ.ಶಶಿ, ಆಸ್ಪತ್ರೆಯಲ್ಲಿ ಅವ್ಯವಸ್ಥೆ ಇರುವುದು ನಿಜ.
ಆದರೆ ನಮ್ಮಿಂದ ಏನೂ ಮಾಡಲಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಈ ಕುರಿತು ಮೇಲಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆದರು. ಹೊನ್ನಯ್ಯ, ಮರಳಾಗಾಲ ಸಿದ್ದರಾಜು, ವೈರಮುಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.