ಬೆಂಗಳೂರು: `ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘವು ಏ.27 ರಂದು ನಡೆಸಲಿರುವ ಮುಷ್ಕರಕ್ಕೆ ತಮ್ಮ ಬೆಂಬಲವಿಲ್ಲ~ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದ ಒಕ್ಕೂಟವು ಹೇಳಿದೆ.
ಭಾರತೀಯ ಮಜ್ದೂರ ಸಂಘ ಕರ್ನಾಟಕ ಪ್ರಾಂತದ ಅಧ್ಯಕ್ಷ ಕೆ.ರಾಮಕೃಷ್ಣ ಪೂಂಜಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಅಧಿಕಾರಿಗಳ ಮತ್ತು ಕಾರ್ಮಿಕರ ವೇತನ ಪರಿಷ್ಕರಣೆಯ ಬಗ್ಗೆ ಸರ್ಕಾರದ ಜತೆಗೆ ಹಲವಾರು ಸುತ್ತಿನ ಮಾತುಕತೆ ನಡೆದಿದೆ~ ಎಂದರು.
`ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮತ್ತು ಸಾರಿಗೆ ಸಚಿವ ಆರ್. ಅಶೋಕ ಅವರನ್ನು ಕಾರ್ಮಿಕರ ಜೀವನಕ್ಕೆ ಅನುಕೂಲವಾಗುವಂತಹ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಂತೆ ಭೇಟಿ ಮಾಡಿ ಚರ್ಚಿಸಲಾಗಿದೆ. ಮುಖ್ಯಮಂತ್ರಿಯವರು ಈ ಬಗ್ಗೆ ಪರಿಶೀಲಿಸಿ ಬೇಡಿಕೆಯನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ~ ಎಂದು ವಿವರಿಸಿದರು.
`ಇಂತಹ ಸಂದರ್ಭದಲ್ಲಿ ಮುಷ್ಕರ ಹೂಡುವ ಅವಶ್ಯಕತೆ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘವು ಮುಷ್ಕರ ಹೂಡಿರುವುದು ಸರಿಯಲ್ಲ. ಸಂಧಾನ ಮುಖೇನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಈ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ~ ಎಂದು ಹೇಳಿದರು.
ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ, ಈಶಾನ್ಯ ರಸ್ತೆ ಸಾರಿಗೆ ಮಜ್ದೂರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.