ADVERTISEMENT

ಕಾರ್ಯಕರ್ತರ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2018, 6:12 IST
Last Updated 10 ಜನವರಿ 2018, 6:12 IST
ಶರಣಪ್ರಕಾಶ
ಶರಣಪ್ರಕಾಶ   

ಕಲಬುರ್ಗಿ: ‘ಕಲಬುರ್ಗಿ ತಾಲ್ಲೂಕಿನ ಸಿರಗಾಪುರ ಕ್ರಾಸ್ ಬಳಿ ಜ.11ರಂದು ಮಧ್ಯಾಹ್ನ 12 ಗಂಟೆಗೆ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯ ಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ, ಸಂಸದ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುವರು. ಮಧ್ಯಾಹ್ನ 3.30 ಗಂಟೆಗೆ ಇಲ್ಲಿನ ವೀರಶೈವ ಕಲ್ಯಾಣ ಮಂಟಪದ ಎದುರು ಕಲಬುರ್ಗಿ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರಗಳ ಕಾರ್ಯಕರ್ತರ ಸಮಾವೇಶ ನಡೆಯಲಿದೆ’ ಎಂದರು.

‘ನಮ್ಮ ಸರ್ಕಾರ ನುಡಿದಂತೆ ನಡೆದಿದೆ. 2013ರ ಚುನಾವಣೆ ಪ್ರಣಾಳಿ ಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಪರಮೇಶ್ವರ ಅವರು ಈ ಬಾರಿಯೂ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಅಭ್ಯರ್ಥಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

‘ಜಿಲ್ಲೆಯಾದ್ಯಂತ 113 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಹೆಸರು ನೋಂದಣಿಗೆ ಜ.14 ಕೊನೆಯ ದಿನವಾಗಿದೆ. ಈ ದಿನಾಂಕವನ್ನು ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಪಹಣಿ ಪಡೆ ಯಲು ರೈತರು ಪರದಾಡುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರಿಗೆ ಸೂಚಿಸಲಾಗುವುದು’ ಎಂದರು.

‘ಸೇಡಂ ತಾಲ್ಲೂಕಿನ 30 ಗ್ರಾಮಗಳು ಗುರುಮಠಕಲ್ ಸೇರ್ಪಡೆಗೆ ನನ್ನ ವಿರೋಧ ಇಲ್ಲ. ಜನರಿಗೆ ಅನುಕೂಲ ಆಗುವುದು ಮುಖ್ಯ. ಜನರಿಗೆ ಒಳ್ಳೆಯದಾಗಬೇಕು ಎಂಬುದು ನಮ್ಮ ಆಶಯ’ ಎಂದು ಹೇಳಿದರು.

ಶಾಸಕ ಡಾ.ಅಜಯ್‌ಸಿಂಗ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ಕುಡಾ ಅಧ್ಯಕ್ಷ ಮಹಮ್ಮದ್ ಅಸಗರ ಚುಲಬುಲ್, ಎನ್‌ಇಕೆಆರ್‌ಟಿಸಿ ಅಧ್ಯಕ್ಷ ಇಲಿಯಾಸ್ ಬಾಗವಾನ ಇದ್ದರು.

* * 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದಾಗ ಐವಾನ್‌–ಇ–ಶಾಹಿ ಅತಿಥಿ ಗೃಹದಲ್ಲಿ ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿಲ್ಲ. ಅದು ಬೆಳ್ಳಿ ಲೇಪಿತ ತಟ್ಟೆಮಾತ್ರ. ಡಾ.ಶರಣಪ್ರಕಾಶ ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.