ADVERTISEMENT

‘ಅಲ್ಪಸಂಖ್ಯಾತರು ಬಿಜೆಪಿಗೆ ಪಾಠ ಕಲಿಸಲಿ’

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2017, 4:53 IST
Last Updated 23 ಅಕ್ಟೋಬರ್ 2017, 4:53 IST

ಕಲಾದಗಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರಿಗೆ ಅಲ್ಪಸಂಖ್ಯಾತರು ಸರಿಯಾದ ಪಾಠ ಕಲಿಸಬೇಕಿದೆ’ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು. ಇಲ್ಲಿನ ಹರಣಶಿಕಾರಿ ಕಾಲೊನಿಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಸುಲ್ತಾನ ಜಯಂತಿ ರದ್ದುಗೊಳಿಸುವುದಾಗಿ ಹೇಳಿಕೆ ನೀಡಿರುವ ಸಂಸದ ಪ್ರಲ್ಹಾದ್ ಜೋಶಿ ಅವರು ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯಕ್ಕಾಗಿ ತನ್ನ ಎರಡೂ ಮಕ್ಕಳನ್ನು ಒತ್ತೆಯಾಳಾಗಿರಿಸಿ ಹೋರಾಡಿದ ಟಿಪ್ಪು ಸುಲ್ತಾನ್‌ನಂತಹ ವೀರನ ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಮಾಡಿರುವುದು ಶ್ಲಾಘನೀಯ’ ಎಂದರು.

‘ಪಕ್ಷದ ಕಾರ್ಯಕರ್ತರು ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತೆರಳಿ ಜನರಿಗೆ ತಲುಪಿಸಬೇಕು. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ ಈಗಾಗಲೇ 158 ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈಡೇರಿಸಿದೆ. ರೈತರು ಸಹಕಾರಿ ಸಂಘದಿಂದ ಪಡೆದ ₹ 50 ಸಾವಿರ ಸಾಲಮನ್ನಾ ಮಾಡಿದೆ’ ಎಂದರು.

ADVERTISEMENT

ಅನ್ನಭಾಗ್ಯ, ಕೃಷಿಭಾಗ್ಯ, ಪಶುಭಾಗ್ಯ, ವಿದ್ಯಾಸಿರಿ, ಕ್ಷೀರಧಾರೆ, ವಸತಿಭಾಗ್ಯ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಉನ್ನತ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ, ಮಾತೃಪೂರ್ಣ ಯೋಜನೆ ತರಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಸೌದಾಗರ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಸಲೀಂ ಶೇಖ್, ಶಿವಗಂಗವ್ವ ಜಮಖಂಡಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಶೋಭಾ ಬಿರಾದಾರ ಪಾಟೀಲ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಮಹಮ್ಮದ್ ಹೊಸಕೋಟಿ, ಸದಸ್ಯರಾದ ಅಂಜಲಿ ಬಾನು, ನೂರಸಾಬ್ ಮುಜಾವರ, ಸುರೇಶ ಆಸಂಗಿ, ಅಮೀನಸಾಬ್ ಬೀಳಗಿ ಮುಖಂಡರಾದ ಪಾಂಡು ಪೊಲೀಸ್, ಬಸವರಾಜ ಸಂಶಿ, ಹೋಬಳೆಪ್ಪ ದೊಡಮನಿ, ಅಕ್ರಮ್‌ ಸೌದಾಗರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.