ADVERTISEMENT

ಆಸರೆ ತ್ವರಿತ ಹಸ್ತಾಂತರಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2011, 5:25 IST
Last Updated 24 ಸೆಪ್ಟೆಂಬರ್ 2011, 5:25 IST

ಬಾಗಲಕೋಟೆ: ನೆರೆ ಸಂತ್ರಸ್ತರಿಗೆ ಇನ್ನೂ ಹಸ್ತಾಂತರವಾಗದೇ ಬಾಕಿ ಉಳಿದಿರುವ `ಆಸರೆ~ ಮನೆಗಳನ್ನು ತ್ವರಿತವಾಗಿ ಹಸ್ತಾಂತರಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಎ. ಹರೀಶಗೌಡ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಆಸರೆ ಮನೆಗಳನ್ನು ಮೂರು ವರ್ಷವಾದರೂ ನಿರ್ಮಿಸಿಕೊಡದೇ ನಿರ್ಲಕ್ಷ್ಯ ಮಾಡಿರುವ ದಾನಿಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು, ಆ ಮನೆಗಳನ್ನು ಸರ್ಕಾರವೇ ಕೈಗೆತ್ತಿಕೊಳ್ಳಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಕೃಷ್ಣಾ, ಮಲಪ್ರಭಾ ಮತ್ತು ಘಟಪ್ರಭಾ ನದಿ ವಾಪ್ತಿಯಲ್ಲಿ ಪ್ರವಾಹದಿಂದ ಉಂಟಾಗಿರುವ ಬೆಳೆಹಾನಿ ಬಗ್ಗೆ ನಿಕರವಾದ ವರದಿಯನ್ನು ಸರ್ಕಾರಕ್ಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಳೆಹಾನಿ ಬಗ್ಗೆ ಸರ್ಕಾರಕ್ಕೆ ತಕ್ಷಣ ವರದಿ ನೀಡಿದರೆ ತೊಂದರೆಗೆ ಒಳಗಾದವರಿಗೆ ಶೀಘ್ರ ಪರಿಹಾರ ನೀಡಲು ಸಹಾಯಕವಾಗುತ್ತದೆ ಎಂದು ಕಂದಾಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಮುಂಬರುವ ದಿನದಲ್ಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದರೆ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿರುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮೀಣ ಪ್ರದೇಶಕ್ಕೆ ಆದ್ಯತೆ ಮೇರೆಗೆ ನೀರು ಪೂರೈಕೆ ಮಾಡಲು ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ಪಡೆದ ಅವರು ಉದ್ಯೋಗ ಖಾತರಿ ಯೋಜನೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದು, ಯಾವುದೇ ರೀತಿಯ ಅನ್ಯಾಯವಾಗಿದ್ದರೆ ಸಂಬಂಧಪಟ್ಟವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು.

ಅಡುಗೆ ಅನಿಲ ಸಿಲಿಂಡರ್, ಪಡಿತರ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಅವರು, ಫಲಾನುಭವಿಗಳಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಪಡಿತರ ಪೂರೈಕೆ ಮಾಡಬೇಕು, ಪಡಿತರ ಅವ್ಯವಹಾರ ಗಮನಕ್ಕೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗ ಹರಡುತ್ತಿರುವ ಬಗ್ಗೆ ವರದಿಯಾಗಿದ್ದು, ಆರೋಗ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರು ಬಂದಿದೆ ಎಂದ ಅವರು, ರೋಗದಿಂದ ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ರಸಗೊಬ್ಬರ, ಬಿತ್ತನೆ ಬೀಜ ಸಮರ್ಪಕ ವಿತರಣೆಗೆ ಕ್ರಮಕೈಗೊಳ್ಳುವಂತೆ ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಎಂ.ಕುಂಜಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಜೆ.ಸಿ. ಪ್ರಕಾಶ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.