ADVERTISEMENT

ಎಸ್‌ಒಯುಗೆ ಯುಜಿಸಿ ಮಾನ್ಯತೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 4:44 IST
Last Updated 13 ಅಕ್ಟೋಬರ್ 2017, 4:44 IST

ಬಾಗಲಕೋಟೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು (ಕೆಎಸ್‌ಒಯು) ರಾಜ್ಯ ಸರ್ಕಾರ ಮುಚ್ಚಲು ಹೊರಟಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದಿಂದ ಗುರುವಾರ ಇಲ್ಲಿನ ರೋಟರಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ರಾಜೇಶ್ ಗುರಾಣಿ ಮಾತನಾಡಿ, ‘ವಿವಿಯು ಮೈಸೂರು ವಿಶ್ವವಿದ್ಯಾಲಯದ ಭಾಗವಾಗಿ ಶಿಕ್ಷಣ ನೀಡುತ್ತಾ ಬಂದಿದೆ. ಬಡತನದ ಕಾರಣಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಸಾಮಾನ್ಯ ವಿವಿಗಳಲ್ಲಿ ಓದಲು ಸಾಧ್ಯವಾಗುತ್ತಿಲ್ಲ. ಅವರಿಗೆ ಕೆಎಸ್‌ಒಯು ತುಂಬಾ ಸಹಕಾರಿಯಾಗಿದೆ.

ಆದರೆ ಸರ್ಕಾರ ಅದನ್ನು ಮುಚ್ಚಲು ಮುಂದಾಗಿರುವುದರಿಂದ ಅವರ ಭವಿಷ್ಯಕ್ಕೆ ತೊಂದರೆಯುಂಟಾಗಲಿದೆ. ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ನೀಡಿರುವ ಹೇಳಿಕೆ ಸರಿ ಇಲ್ಲ. ನಿಮಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ವಿವಿಗೆ ಯುಜಿಸಿ ಮಾನ್ಯತೆ ಕೊಡಿಸಲು ಮುಂದಾಗಬೇಕು. ಇಲ್ಲವೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು’ ಎಂದರು.

ಸಂಘಟನೆಯು ಮೈಸೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೇ 13 ರಂದು ಬೆಂಗಳೂರಿನ ಪ್ರೀಡ್‌ಂಪಾರ್ಕ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ಹಾಗೂ ಶಿಕ್ಷಣ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿವಿಗೆ ಮಾನ್ಯತೆ ನೀಡುವ ಸಂಬಂಧ ಗೊಂದಲ ಸೃಷ್ಟಿಸಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ನಗರ ಘಟಕದ ಕಾರ್ಯದರ್ಶಿ ಯಮುನಾ ಚಲವಾದಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.