ADVERTISEMENT

ಕಾರ್ಖಾನೆ ವಿರುದ್ಧ ಗೌಡರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2011, 8:40 IST
Last Updated 10 ಜೂನ್ 2011, 8:40 IST
ಕಾರ್ಖಾನೆ ವಿರುದ್ಧ ಗೌಡರ ಪ್ರತಿಭಟನೆ
ಕಾರ್ಖಾನೆ ವಿರುದ್ಧ ಗೌಡರ ಪ್ರತಿಭಟನೆ   

ಬಾಗಲಕೋಟೆ: ಜಿಲ್ಲೆಯ ಮುಧೋಳ ಪಟ್ಟಣದ ಸಮೀಪದಲ್ಲಿರುವ ನಿರಾಣಿ ಸಕ್ಕರೆ ಕಾರ್ಖಾನೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಆರೋಪಿಸಿ ಹಲವು ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕೈಜೋಡಿಸಿದ್ದಾರೆ.

ಮುಧೋಳ ತಹಸೀಲ್ದಾರ ಕಚೇರಿ ಎದುರು ನಡೆಯುತ್ತಿರುವ ಧರಣಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ  ಅವರು ಈ  ಹೋರಾಟಕ್ಕೆ ಬಲ ತುಂಬಿದರು.

ನಂತರ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, `ಬಿಜೆಪಿ ಆಡಳಿತಾವಧಿಯಲ್ಲಿ ಕೆಲವು ಸಚಿವರು ಕೈಗಾರಿಕೆ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು `ವ್ಯಾಪಾರಿ ಉದ್ದೇಶ~ಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲಾಗದು~ ಎಂದರು.

ಸೋರಗಾವಿ ಗ್ರಾಮಕ್ಕೆ ಇದೇ 18ರಂದು ಭೇಟಿ ನೀಡಿ, ಸಕ್ಕರೆ ಕಾರ್ಖಾನೆಯಿಂದ ಉಂಟಾಗುತ್ತಿರುವ ಮಾಲಿನ್ಯವನ್ನು ಪರಿಶೀಲಿಸಿ ಹೋರಾಟವನ್ನು ಮತ್ತೆ ಮುಂದುವರಿಸುವುದಾಗಿ ಹೇಳಿದರು.

ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರೂ ಆಗಿರುವ ಬಿಜೆಪಿ ಮುಖಂಡ ರಾಮಣ್ಣ ತಳೇವಾಡ ನೇತೃತ್ವದಲ್ಲಿ ನಿರಾಣಿ ಕಾರ್ಖಾನೆ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಜೆಡಿಎಸ್ ವಕ್ತಾರ ವೈ.ಎಸ್.ದತ್ತ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಸವಪ್ರಭು ಸರನಾಡಗೌಡ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ಇದಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, `ತಮ್ಮ ಕಾರ್ಖಾನೆ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ. ಬೆರಳೆಣಿಕೆಯಷ್ಟು ಜನರು ಇದನ್ನು ಬೆಂಬಲಿಸಿದ್ದಾರೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.