ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿ ಹೆಚ್ಚಳ: ಶ್ರೀರಾಮಲು

ಬಿಜೆಪಿ ಬೀಳಗಿ ಮಂಡಳದ ಎಸ್‌ಸಿ, ಎಸ್‌ಟಿ ಸಮಾವೇಶ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 5:41 IST
Last Updated 31 ಮಾರ್ಚ್ 2018, 5:41 IST

ಬೀಳಗಿ: ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಸಂಸದ ಶ್ರೀರಾಮಲು ಹೇಳಿದರು. ಇಲ್ಲಿಯ ಬಿಜೆಪಿ ಕಾರ್ಯಾಲಯದ ಆವರಣದಲ್ಲಿ ಶನಿವಾರ ಬಿಜೆಪಿ ಬೀಳಗಿ ಮಂಡಳದ ಎಸ್‌ಸಿ, ಎಸ್‌ಟಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಹಿಂದ ಹೆಸರಿನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಈ ಜನಾಂಗದ ಕಣ್ಣಿಗೆ ಸುಣ್ಣ ಬಳಿದಿದ್ದಾರೆ. ದೇಶದಲ್ಲಿ ಹೆಚ್ಚು ಕಾಲ ಆಡಳಿತ ನಡೆಸಿ, ಜನಾಂಗವನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದೆ. ಆದರೆ ಅಭಿವೃದ್ಧಿಗೆ ಯಾವುದೇ ಕ್ರಮಕೈಗೊಂಡಿಲ್ಲ’ ಎಂದುದೂರಿದರು.

‘ತಳವಾರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.7 ಕ್ಕಿಂತ ಹೆಚ್ಚಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಗಿತಗೊಂಡ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ರೈತರ, ಮಹಿಳಾ ಸ್ವಸಹಾಯ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡುವ ಗುರಿ ಹೊಂದಲಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವಂತೆ’ ಮನವಿ ಮಾಡಿದರು.

ADVERTISEMENT

‘ಕಾಂಗ್ರೆಸ್ ಸರ್ಕಾರದ 5 ವರ್ಷದ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ 3 ಸಾವಿರಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ರೈತ ವಿರೋಧ ನೀತಿಯನ್ನು ಅನುಸರಿಸಿದೆ’ ಎಂದು ಆರೋಪಿಸಿದರು.

ಶಾಸಕ ಗೋವಿಂದ ಕಾರಜೋಳ ಮಾತನಾಡಿ, ‘ಕಾಂಗ್ರೆಸ್ ಆಡಳಿತದಲ್ಲಿ ದಲಿತರಿಗೆ ಸರಿಯಾದ ಶಿಕ್ಷಣ, ಉದ್ಯೋಗ ಸಿಗಲಿಲ್ಲ. ಕೇವಲ ಮತಬ್ಯಾಂಕ್‌ ಮಾಡಿಕೊಂಡು ಅನ್ಯಾಯ ಮಾಡಿದ್ದಾರೆ’ ಎಂದು ದೂರಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ, ವಿಧಾನ ಪರಷತ್ ಸದಸ್ಯ ಎಚ್.ಆರ್. ನಿರಾಣಿ, ಎಂ.ಆರ್. ಕೋಲಕಾರ, ಕೆ.ವಿ. ಪಾಟೀಲ, ಸಿದ್ದಪ್ಪ ಕಡಪಟ್ಟಿ,ಹೂವಪ್ಪ ರಾಠೋಡ, ಈರಣ್ಣ ಗಿಡ್ಡಪ್ಪಗೋಳ, ಎಂ.ಎಂ. ಶಂಬೋಜಿ, ಸಂಗಪ್ಪ ಕಟಗೇರಿ, ಮಾದೇವಪ್ಪ ತಳವಾರ, ಬೆನ್ನಪ್ಪ ಬೀಳಗಿ
ಸೇರಿದಂತೆ ಮತ್ತಿತರರು ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.