ADVERTISEMENT

ಮುಧೋಳದಲ್ಲಿ ಸ್ನಾತಕೋತ್ತರ ಕೇಂದ್ರ:ಸಚಿವ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 7:15 IST
Last Updated 16 ಆಗಸ್ಟ್ 2012, 7:15 IST

ಬಾಗಲಕೋಟೆ: ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಮುಂಬರುವ ಶೈಕ್ಷಣಿಕ ಸಾಲಿನಿಂದ ಬಾಗಲಕೋಟೆ, ಮುಧೋಳ ಮತ್ತು ವಿಜಾಪುರದಲ್ಲಿ ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ 66ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.ಸ್ನಾತಕೋತ್ತರ ಕೇಂದ್ರ ಆರಂಭಕ್ಕೆ ಸಂಬಂಧಪಟ್ಟಂತೆ ಮಂಗಳವಾರ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಚರ್ಚಿಸಿದ್ದು, ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಸರ್ಕಾರಿ ಜಾಗವನ್ನು ಒದಗಿಸಲು ಶೀಘ್ರ ಕ್ರಮಕೈಗೊಳ್ಳುವುದಾಗಿ ಹೇಳಿದರು.

ಚರ್ಚೆ ನಡೆದಿಲ್ಲ: ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಒಳ ಮೀಸಲಾತಿ ನೀಡುವ ಸಂಬಂಧ ನೇಮಿಸಲಾಗಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗ ಇತ್ತೀಚೆಗೆ ಸರ್ಕಾರಕ್ಕೆ ವರದಿ ನೀಡಿದೆ. ವರದಿ ಗೌಪ್ಯವಾಗಿದ್ದು, ಸರ್ಕಾರದ ಪರಿಶೀಲನೆಯಲ್ಲಿದೆ, ವರದಿ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ವರದಿಯ ಬಗ್ಗೆ ವಿಧಾನ ಮಂಡಲದಲ್ಲಿ ಚರ್ಚೆ ನಡೆಯಬೇಕಿದೆ. ಬಳಿಕ ಅದರ ಜಾರಿ ಮಾಡುವ, ಇಲ್ಲವೇ ಬಿಡುವ ಬಗ್ಗೆ ಚಿಂತಿಸಲಾಗುವುದು. ಆದರೆ, ಇಷ್ಟರಲ್ಲೇ ವರದಿಯ ಪರ, ವಿರುದ್ಧ ಚರ್ಚೆ, ಪ್ರತಿಭಟನೆ ನಡೆಯುತ್ತಿರುವುದು ಕೇವಲ ರಾಜಕೀಯ ಉದ್ದೇಶದಿಂದ ಎಂದು ಆರೋಪಿಸಿದರು.

ಸಮಾಜದಲ್ಲಿ ನಾಯಕರಾಗಿ ಗುರುತಿಸಿಕೊಳ್ಳಬೇಕು ಎಂಬ ಕೆಲವರ ವೈಯಕ್ತಿಕ ಲಾಭಕ್ಕಾಗಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ದೂರಿದ ಅವರು, ಅರ್ಹರಿಗೆ ಮೀಸಲಾತಿ ಸಿಗಬೇಕಿದೆ ಎಂದು ಪ್ರತಿಪಾದಿಸಿದರು.

ಸೂಕ್ತಕ್ರಮ: ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ 21 ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನದಲ್ಲಿ ಆಗಿರುವ ಲೋಪದ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದರು.ಕಾಮಗಾರಿ ಕಳಪೆ ಇರುವ ಬಗ್ಗೆ ವರದಿಯಾಗಿದ್ದು, ಸಂಬಂಧಪಟ್ಟ ಗುತ್ತಿಗೆದಾರರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಪಾಳು ಬಿದ್ದಿರುವ ಈಜುಕೊಳದ ದುರಸ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಸಕ ವೀರಣ್ಣ ಚರಂತಿಮಠ, ವಿಧಾನಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ, ಜಿ.ಪಂ. ಸಿಇಒ ಎಸ್.ಜಿ. ಪಾಟೀಲ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ತಾ.ಪಂ. ಅಧ್ಯಕ್ಷೆ ತಾರಾಬಾಯಿ ಚವ್ಹಾಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.