ADVERTISEMENT

ಶಿಕ್ಷಕರ ಬೇಡಿಕೆ ಈಡೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 8:17 IST
Last Updated 12 ಡಿಸೆಂಬರ್ 2013, 8:17 IST

ಬಾಗಲಕೋಟೆ: ಶಿಕ್ಷಕರ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿ ವಿಧಾನಪರಿಷತ್‌ ಸದಸ್ಯ ಅರುಣ ಶಹಾಪುರ ಅವರು ವಿಜಾಪುರಕ್ಕೆ ಬುಧವಾರ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಸರ್ಕಾರದ ಕಠಿಣ ನಿಲುವಿನಿಂದ ಬೇಷತ್ತಿರುವ ಶಿಕ್ಷಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನ್ಯಾಯಾಲಯದ ಮೊರೆ ಹೋಗಬೇಕಾದ ಪ್ರಸಂಗ ಎದುರಾಗಿದೆ ಎಂದು ಅವರು ಮುಖ್ಯಮಂತ್ರಿಗೆ ಮನವರಿಕೆ ಮಾಡಿದರು.

ಅನುದಾನಕ್ಕೆ ಒಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸೇವೆಯನ್ನು ಅವರು ಸೇವೆಗೆ ಸೇರಿದ ದಿನದಿಂದ ಅನುದಾನಕ್ಕೆ ಒಳಪಟ್ಟ ದಿನಾಂಕದ ವರೆಗಿನ ಅವಧಿ­ಯನ್ನು ಸೇವಾ ಅವಧಿ ಎಂದು ಪರಿಗಣಿಸಲು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪನ್ನು, ನ್ಯಾಯಾಲಯಕ್ಕೆ ಮೊರೆಹೋಗಿರುವ ಶಿಕ್ಷಕರಿಗೆ ಮಾತ್ರ ಅನ್ವಯಿಸದೇ ಎಲ್ಲ ಶಿಕ್ಷಕರಿಗೂ ಅನ್ವಯಿಸಬೇಕು ಎಂದು ಆಗ್ರಹಿಸಿದರು.

1995ರ ವರೆಗಿನ ಎಲ್ಲ ಶಾಶ್ವತ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಸರ್ಕಾರಿ ನೌಕರರಿಗೆ ದೊರೆಯುತ್ತಿರುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ದೊರೆಯುವಂತೆ ಆದೇಶ ಮಾಡಬೇಕು ಎಂದು ಒತ್ತಾಯಿಸಿದರು.

ಯೋಜನೆಯಡಿಯಲ್ಲಿ ವೇತನ ಪಡೆಯುತ್ತಿರುವ ಎಲ್ಲ ಶಾಲಾ ಕಾಲೇಜುಗಳನ್ನು ಯೋಜನೇತರ ಅಡಿಯಲ್ಲಿ ತರಬೇಕು, ದೈಹಿಕ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಾವಳಿ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಹಾಪುರ ಆಗ್ರಹಿಸಿದರು. ವಿಜಾಪುರ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿ ರಾಜ್ಯದಲ್ಲಿ 29 ನೇ ಸ್ಥಾನ್ದಲ್ಲಿದ್ದು, ವಿಜಾಪುರ ಜಿಲ್ಲೆಯ ಎಲ್ಲ ಶಾಲೆಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಪ್ಯಾಕೇಜ್‌ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.