ADVERTISEMENT

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 5:16 IST
Last Updated 26 ಅಕ್ಟೋಬರ್ 2017, 5:16 IST
ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ
ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ   

ಬಾಗಲಕೋಟೆ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ) ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನವನಗರದ ಜಿಲ್ಲಾಡಳಿತ ಭವನಕ್ಕೆ ಪ್ರತಿಭಟನಾ ಮೆರವಣಿಗೆಯಲ್ಲಿಬಂದ ಸಂಘಟನೆಯ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವ ಹಾದಿಮನಿ ಮಾತನಾಡಿ, ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣಕ್ಕಾಗಿ ನೇಮಕವಾಗಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಸಲ್ಲಿಸಿ 6 ವರ್ಷವಾಗಿದೆ. ರಾಜಕೀಯ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯೋಗ ನೀಡಿರುವ ವರದಿಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಶೋಷಿತರಿಗೆ ರಾಜಕೀಯ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿ ಸಾಕಾರವಾಗಲು ಸಂವಿಧಾನಬದ್ಧವಾಗಿ ಮೂಲಭೂತ ಹಕ್ಕು ನೀಡಲಾಗಿದೆ. ಆದರೆ ಅದು ಈ ಎಲ್ಲ ಉಪಜಾತಿಗಳ ನಡುವೆ ಇನ್ನೂ ಸರಿಯಾಗಿ ಹಂಚಿಕೆಯಾಗಿಲ್ಲ ಎಂದರು.

ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಬೆಳಗಾವಿ ಅಧಿವೇಶನದಲ್ಲಿ ಅಂಗೀಕರಿಸಿ ಸಂವಿಧಾನ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಹಿಂದುಳಿದ ವರ್ಗಗಳ ಅಧ್ಯಕ್ಷ ಕಾಂತರಾಜ ಆಯೋಗದ ವರದಿ ಅನುಷ್ಠಾನಗೊಳಿಸಿ ಎಲ್ಲ ಜಾತಿಗಳಿಗೆ ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು ಎಂದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ತಳಗೇರಿ ಮಾತನಾಡಿ, ಬಡ್ತಿ ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ 15 ಸಾವಿರ ಪರಿಶಿಷ್ಟ ನೌಕರರು ಹಿಂಬಡ್ತಿ ಹೊಂದುವ ಆತಂಕದಲ್ಲಿದ್ದಾರೆ. ಬಡ್ತಿ ಮುಂದುವರೆಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಮೇಶ ದುರದುಂಡಿ, ಜಿಲ್ಲಾ ಕಾರ್ಯದರ್ಶಿ ಉದಯ ಕಾಂಬಳೆ, ಮೆಹಬೂಬ ಮೊಮಿನ್, ಸಂಗಪ್ಪ ಮಡ್ಡಿ, ರುದ್ರಪ್ಪ ವರವಡದಿನ್ನಿ, ಶಾಮ ಮಾದರ, ಉದಯ ಮಾದರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.